ಕೂಡಲೇ ನೀರು ಬಿಡುಗಡೆ ನಿಲ್ಲಿಸಿ

26 HDK 1
Published on

ಎಚ್.ಡಿ.ಕೋಟೆ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘಟನೆ ವತಿಯಿಂದ ಪಟ್ಟಣದ ತಾಲೂಕು ಆಡಳಿತ ಸೌಧದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.


ತಹಸೀಲ್ದಾರ್ ಕಚೇರಿ ಆವರಣದಲ್ಲಿ ಸೇರಿದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯದಲ್ಲಿ ಮಳೆ ಇಲ್ಲದೆ ಕುಡಿಯುವ ನೀರಿಗೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಕೂಡಲೇ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.


ರೈತ ಸಂಘದ ತಾಲೂಕು ಅಧ್ಯಕ್ಷ ಮಾದೇವ ನಾಯಕ ಮಾತನಾಡಿ, ರಾಜ್ಯದಲ್ಲಿ ನೀರಿನ ಅಭಾವವಿದ್ದರೂ ತಮಿಳುನಾಡಿಗೆ ನೀರು ಹರಿಸುತ್ತಿರುವುದು ಸರಿಯಲ್ಲ. ಮೇಕೆದಾಟು ಬಳಿ ಸೇತುವೆ ನಿರ್ಮಿಸಿ ಹೆಚ್ಚಿನ ನೀರು ಸಂಗ್ರಹ ಮಾಡುತ್ತೇವೆ ಎಂದು ಹೋರಾಟ ಆರಂಭಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಎಲ್ಲವನ್ನೂ ಮರೆತು ಕಬಿನಿ, ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿ ರೈತರ ಕಣ್ಣೀರು ಹರಿಸುತ್ತಿದೆ. ಇಂತಹ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.


ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಚುನಾವಣೆಯಲ್ಲಿ ಗೆಲ್ಲುವವರೆಗೆ ರೈತ ಸಂಘಟನೆಗಳು ಬೇಕಾಗಿದ್ದವು. ಈಗ ರೈತ ಸಂಘಟನೆಗಳು ಹಾಗೂ ಅನ್ನದಾತನನ್ನು ಮರೆತು ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸುತ್ತೇವೆ. ಮುಂದಿನ ದಿನಗಳಲ್ಲಿ ನೀರು ನಿಲ್ಲಿಸದಿದ್ದಲ್ಲಿ ದೊಡ್ಡ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ನಂತರ ಕಂದಾಯ ಇಲಾಖೆ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಗರ ಘಟಕದ ಅಧ್ಯಕ್ಷ ಪ್ರಸಾದ್, ಯುವ ಘಟಕದ ಅಧ್ಯಕ್ಷ ನಂದೀಶ್, ಪ್ರಧಾನ ಕಾರ್ಯದರ್ಶಿ ಮನೋಜ್, ಸಂಘಟನಾ ಕಾರ್ಯದರ್ಶಿ ಮಂಜುನಾಥ್ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net