ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರಿ ಸೌಲತ್ತು ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ

10 smg 2
Published on

ಶಿವಮೊಗ್ಗ: ಜಿಲ್ಲೆಯ ಬೀದಿ ಬದಿ ವ್ಯಾಪಾರಿಗಳಿಗೆ ಆಶ್ರಯ ಯೋಜನೆಯಡಿ ಮನೆಗಳು ಮತ್ತು ಸರ್ಕಾರಿ ಸೌಲಭ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಶುಕ್ರವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ಎಲ್ಲ ಸಮುದಾಯದ ಬೀದಿ ಬದಿ ವ್ಯಾಪಾರಿಗಳು ಕಡುಬಡವರು, ನಿರ್ಗತಿಕರೂ ಆಗಿದ್ದಾರೆ. ಪ್ರತಿನಿತ್ಯ ಚಳಿ, ಗಾಳಿ, ಮಳೆಯನ್ನೂ ಲೆಕ್ಕಿಸದೇ ವ್ಯಾಪಾರ ನಡೆಸಿ ಜೀವನ ಸಾಗಿಸಬೇಕಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ. ಸ್ವಂತ ಮನೆಗಳಿಲ್ಲ, ಆರ್ಥಿಕವಾಗಿಯೂ ಸಂಕಷ್ಟದಲ್ಲಿದ್ದಾರೆ ಎಂದು ಅಳಲು ತೋಡಿಕೊಂಡರು.

ಸರ್ಕಾರದಿಂದ ಕಟ್ಟಡ ಕಾರ್ಮಿಕರಿಗೆ ಒದಗಿಸುವ ಕಾರ್ಮಿಕರ ಕಾರ್ಡ್ ಮತ್ತು ಅವರ ಮಕ್ಕಳ ಶಿಕ್ಷಣಕ್ಕೆ ನೀಡುವ ವಿದ್ಯಾರ್ಥಿ ವೇತನ ಮತ್ತು ಅವರ ಹೆಣ್ಣು ಅಥವಾ ಗಂಡು ಮಕ್ಕಳ ಮದುವೆಗೆ ನೀಡುವ ಸಹಾಯಧನ ಸೇರಿದಂತೆ ಹಲವು ಸೌಲಭ್ಯಗಳನ್ನು ಬೀದಿ ಬದಿ ವ್ಯಾಪಾರಿಗಳಿಗೆ ಇದುವರೆಗೂ ಸಿಗುತ್ತಿಲ್ಲ ಎಂದು ದೂರಿದರು.

ಹಾಗಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಆಶ್ರಯ ಯೋಜನೆಯಡಿ ಮನೆ, ಗುರುತಿನ ಚೀಟಿ, ಮಕ್ಕಳ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿ ವೇತನ, ವೈದ್ಯಕೀಯ ಸೌಲಭ್ಯ, ಬಾಣಂತಿಯರಿಗೆ ಸಹಾಯಧನ, ವೃದ್ದಾಪ್ಯವೇತನ, ಅಂಗವಿಕಲ ವೇತನ ಮತ್ತು ಮಕ್ಕಳ ಮದುವೆಗೆ ಸಹಾಯಧನದ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಕಾರ್ಯಾಧ್ಯಕ್ಷ ಎಸ್.ಬಿ.ಅಶೋಕುಮಾರ್, ಅಧ್ಯಕ್ಷ ಮಣಿಗೌಂಡರ್, ಪ್ರಧಾನ ಕಾರ್ಯದರ್ಶಿ ಎಂ.ದಿನೇಶ್, ಮಹಿಳಾ ಘಟಕದ ಅಧ್ಯಕ್ಷೆ ಎಸ್.ಜಾನ್ಹವಿ, ಉಪಾಧ್ಯಕ್ಷ ನವೀನ್‌ಕುಮಾರ್, ಗೌರಮ್ಮ, ಉಷಾ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net