

ಶಿವಮೊಗ್ಗ: ಶಿಕ್ಷಣದ ಜತೆಗೆ ವಿದ್ಯಾರ್ಥಿಗಳು ಜೀವನ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್.ಸಂತೋಷ್ ಹೇಳಿದರು.
ನಗರದ ಸಿಬಿಆರ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕಾನೂನು ಅಧ್ಯಯನ ಕೇಂದ್ರದಿಂದ ತಾಲೂಕಿನ ಕೂಡ್ಲಿಯಲ್ಲಿ ಏರ್ಪಡಿಸಿದ್ದ ಎನ್‌ಎಸ್‌ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪಾಲಕರು ಮತ್ತು ಶಿಕ್ಷಕರಿಗೆ ಗೌರವ ನೀಡುವುದರ ಜತೆಗೆ ಸಾಮಾಜಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದರು.
ಜೀವನದಲ್ಲಿ ಶಿಸ್ತು-ಸಂಯಮ, ಉತ್ತಮ ಸಂಸ್ಕಾರ ಹಾಗೂ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಬೇಜವಾಬ್ದಾರಿಯಿಂದ ವಾಹನ ಚಾಲನೆ ಮಾಡುವುದು, ಸಾರ್ವಜನಿಕವಾಗಿ ಅಶಿಸ್ತಿನ ವರ್ತನೆ ತೋರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ ಮಾತನಾಡಿ, ಕೃಷಿಗೆ ಸಂಬಂಧಿಸಿದ ಕಾನೂನು ತೊಡಕುಗಳು, ಜಮೀನಿಗೆ ಸಂಪರ್ಕ ಕಲ್ಪಿಸುವ ರಸ್ತೆ ವಿವಾದಗಳು, ಒತ್ತುವರಿ ಸಂಬಂಧಿಸಿದ ವಿಷಯಗಳ ಬಗ್ಗೆ ಕಾನೂನು ವಿದ್ಯಾರ್ಥಿಗಳು ವಿಶೇಷ ಅಧ್ಯಯನ ನಡೆಸಬೇಕಾದ ಅವಶ್ಯಕತೆಯಿದೆ ಎಂದು ಹೇಳಿದರು.
ಎನ್‌ಇಎಸ್ ನಿರ್ದೇಶಕ ಎಂ.ಎಸ್.ಅನಂತದತ್ತ, ಕಾಲೇಜಿನ ಪ್ರಾಚಾರ್ಯೆ ಡಾ.ಎ.ಅನಲ, ಎನ್‌ಇಎಸ್ ಘಟಕದ ಸಂಯೋಜಕ ಡಾ.ಎಸ್.ಕಾಂತರಾಜ್, ಸಹ ಪ್ರಾಧ್ಯಾಪಕ ಡಾ.ಬಿ.ಸಿ ಬಸಪ್ಪ ಮುಂತಾದವರಿದ್ದರು.