

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ಮಾರ್ಗದಲ್ಲಿ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಹೆಚ್ಚುವರಿ ಬಸ್ ಸೇವೆ ಒದಗಿಸಿ ಎಂದು ಅನೇಕ ಬಾರಿ ಮನವಿ ಮಾಡಿದರು ಸಹ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶಗೊಂಡ ವಿದ್ಯಾರ್ಥಿಗಳ ಗುಂಪು, ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಿದೆ.
ಹೆಚ್ಚುವರಿ ಬಸ್ ಸೇವೆ ಒದಗಿಸುವಂತೆ ಆಗ್ರಹಿಸಿದ ವಿದ್ಯಾರ್ಥಿಗಳು, ರಸ್ತೆಗಿಳಿದ ಬಸ್ ಅನ್ನು ತಡೆದು, ಬಸ್ ಡಿಪ್ಪೋ ಮತ್ತು ಸಾರಿಗೆ ಇಲಾಖೆಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಎಬಿವಿಪಿ ಸಂಘಟನೆ ಮತ್ತು ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ದೊಡ್ಡಬಳ್ಳಾಪುರದ ಘಾಟಿ ಸುಬ್ರಮಣ್ಯ ಮಾರ್ಗಕ್ಕೆ ಹೆಚ್ಚುವರಿ ಬಸ್ ಕಲ್ಪಿಸುವಂತೆ ಆಗ್ರಹಿಸಿದ್ದಾರೆ.
ಬಸ್ ಬಿಡುವಂತೆ ಈ ಹಿಂದೆ ಹಲವು ಬಾರಿ ಮನವಿ ಮಾಡಿದರು ಕೂಡ ಯಾವುದೇ ಕ್ರಮ ಕೈಗೊಳ್ಳದ ಡಿಪೋ ಮ್ಯಾನೇಜರ್ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಕೆಎಸ್ಆರ್ಟಿಸಿ ಅಧಿಕಾರಿಗಳು ಬರುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
200 ರಿಂದ 300 ವಿದ್ಯಾರ್ಥಿಗಳು ಸಂಚರಿಸುವ ಮಾರ್ಗಕ್ಕೆ ಹೆಚ್ಚುವರಿ ಬಸ್ ಅಗತ್ಯವಿದೆ ಎಂದು ಹೇಳಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಬರುವವರೆಗೂ ಬಸ್ ಸಂಚರಿಸಲು ಬಿಡುವುದಿಲ್ಲ ಎಂದು ತಡೆಹಿಡಿದು ಪ್ರತಿಭಟಿಸಿದ್ದಾರೆ.