

ಶಿವಮೊಗ್ಗ: ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪ್ರಾಧ್ಯಾಪಕ ಡಾ. ಎಂ.ಇ.ಶಿವಕುಮಾರ ಹೊನ್ನಾಳಿ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಓರಿಯೆಂಟೇಷನ್ ಮತ್ತು ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳು ಸರಿಯಾದ ಆದರ್ಶ ವ್ಯಕ್ತಿತ್ವಗಳನ್ನು ಮಾದರಿಯಾಗಿ ಇಟ್ಟುಕೊಳ್ಳುವುದು ಮುಖ್ಯ. ಸಾಧಕರ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿದರೆ ಉನ್ನತ ಸಾಧನೆ ಮಾಡಲು ಪ್ರೇರಣೆ ಸಿಗುತ್ತದೆ. ಶಾಲಾ ಕಾಲೇಜಿನ ದಿನಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನೆರವಾಗುತ್ತವೆ. ಪಾಲಕರು, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಬೇಕು ಎಂದು ತಿಳಿಸಿದರು.
ಯುಪಿಎಸ್‌ಸಿ ಪರೀಕ್ಷೆಯಲ್ಲಿ 421ನೇ ರ‌್ಯಾಂಕ್ ಪಡೆದ ಬಿ.ಎಂ.ಮೇಘನಾ ಮಾತನಾಡಿ, ನಮ್ಮ ಭಾಷೆ, ಪ್ರಾದೇಶಿಕ, ಸಂಸ್ಕೃತಿಯು ನಮ್ಮನ್ನು ಹೊಸತನದೆಡೆಗೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಕೆಟ್ಟ ಆಕರ್ಷಣೆಗಳಿಂದ ದೂರವಿರಬೇಕು. ಶ್ರದ್ಧೆ, ಸಂಕಲ್ಪ, ಶಿಸ್ತು ಇದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಎಂದರು.
ಡಿವಿಎಸ್ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ನಮ್ಮ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ನಡೆಸಿದ್ದು, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಡಿವಿಎಸ್ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ, ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ ಇತರರಿದ್ದರು.