

ಬೆಂಗಳೂರು: ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ ಚೈತ್ರಾ ಕುಂದಾಪುರ ಮತ್ತು ಗ್ಯಾಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಸಿಸಿಬಿ 800 ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ.
ನಗರದ 3 ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ ಸಿಸಿಬಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಎಂಎಲ್ಎ ಟಿಕೆಟ್ ಡೀಲ್ ಪ್ರಕರಣದ ಸಂಬಂಧ ಸುಮಾರು ೬೮ ಸಾಕ್ಷ್ಯಗಳನ್ನು ಕಲೆ ಹಾಕಿದೆ. 75 ಸಾಕ್ಷಿದಾರರ ಹೇಳಿಕೆಗಳನ್ನು ದಾಖಲಿಸಿ ಒಟ್ಟು ೮೦೦ ಪುಟಗಳ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಮಿಗೆ ವಂಚನೆ ಪ್ರಕರಣದ ಸಂಬಂಧ ಮೊದಲು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಎ್ಐಆರ್ ದಾಖಲಾಗಿತ್ತು. ಕೊಟ್ಯಂತರ ರೂ. ವಂಚನೆಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಸಿಬಿಗೆ ವರ್ಗಾಹಿಸಿ ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದರು. ಸಿಸಿಬಿ ಘಟಕದ ಮಹಿಳಾ ಸಂರಕ್ಷಣಾ ದಳದ ಎಸಿಪಿ ನೇತೃತ್ವದಲ್ಲಿ ತನಿಖೆ ಕೈಗೊಂಡ ಅಧಿಕಾರಿಗಳು ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿ 8 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.