

ಶಿವಮೊಗ್ಗ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಾಲೇಜು ಹಂತದಿಂದಲೇ ಸಿದ್ಧತೆ ಆರಂಭಿಸಿದರೆ ಯಶಸ್ಸು ಸಾಧಿಸಬಹುದು ಎಂದು ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ಮನೋವೈದ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ, ಈ ಬಾರಿಯ ಯುಪಿಎಸ್‌ಸಿಯಲ್ಲಿ ಉತ್ತಮ ರ‌್ಯಾಂಕಿಂಗ್ ಪಡೆದಿರುವ ಡಾ. ದಯಾನಂದ ಸಾಗರ್ ಹೇಳಿದರು.
ಕುವೆಂಪು ರಂಗಮಂದಿರದಲ್ಲಿ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ವತಿಯಿಂದ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ನಡೆಸಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ಸಮಾಜದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಜೀವನದಲ್ಲಿ ಗುರಿಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿರಬೇಕು. ಹಂತ ಹಂತವಾಗಿ ಗುರಿಯೆಡೆಗೆ ಹೆಜ್ಜೆ ಇರಿಸಬೇಕು. ನಿರಂತರ ಪರಿಶ್ರಮದಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ. ಸಾಧನೆಯ ಜತೆಯಲ್ಲಿ ಸಮಾಜದ ಪ್ರಗತಿಗೆ ಕೈಜೋಡಿಸಬೇಕು ಎಂದರು. ತಾವು ಯುಪಿಎಸ್‌ಸಿಯಲ್ಲಿ ಉತ್ತಮ ಸಾಧನೆ ಮಾಡಲು ಅನುಸರಿಸಿದ ಮಾರ್ಗಗಳ ಕುರಿತು ಈ ಸಂದರ್ಭದಲ್ಲಿ ಅವರು ವಿವರಿಸಿದರು.
ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿರುವ ಡಾ. ದಯಾನಂದ ಸಾಗರ್ ಅವರು ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರ ಜೀವನಶೈಲಿ, ಅಧ್ಯಯನ ಕ್ರಮ ಅರಿತುಕೊಂಡು ವಿದ್ಯಾರ್ಥಿಗಳು ಅದನ್ನು ಅಳವಡಿಸಿಕೊಳ್ಳಬೇಕು ಎಂದರು.
ಡಿವಿಎಸ್ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಮಾತನಾಡಿದರು. ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಸಹ ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಚಿನ್, ಐಕ್ಯೂಎಸಿ ಸಂಯೋಜಕ ಪ್ರೊ. ಎನ್.ಕುಮಾರಸ್ವಾಮಿ, ವಿದ್ಯಾರ್ಥಿ ಕ್ಷೇಮಪಾಲಕಿ ಪ್ರೊ. ಎಸ್.ಕೆ.ಸಾವಿತ್ರಿ ಉಪಸ್ಥಿತರಿದ್ದರು.