ಎಚ್‌ಡಿಕೆ ಭೇಟಿ ಮಾಡಿದ ಸುಧಾಕರ್; ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ತೀವ್ರ ಲಾಬಿ

Su
Published on

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ೋಷಣೆಯಾದ ಬಳಿಕ ಬಿಜೆಪಿ ನಾಯಕರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಮನೆಗೆ ಸರಣಿ ಭೇಟಿ ನೀಡುತ್ತಿದ್ದಾರೆ.

ಮಾಜಿ ಸಚಿವ ಡಾ.ಕೆ.ಸುಧಾಕರ್ ಸೋಮವಾರ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸೋಲು ಕಂಡಿರುವ ಸುಧಾಕರ್ ಲೋಕಸಭೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭೆ ಸದಸ್ಯ ಬಚ್ಚೇಗೌಡ ಈ ಬಾರಿ ಸ್ಪರ್ಧಿಸುವುದು ಅನುಮಾನ. ಈ ಹಿನ್ನೆಲೆಯಲ್ಲಿ ಸುಧಾಕರ್ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಜೆಡಿಎಸ್‌ನ ಮತಗಳಿವೆ. ಅಲ್ಲದೆ ಕುಮಾರಸ್ವಾಮಿ ಮತ್ತು ದೇವೇಗೌಡರು ಬಿಜೆಪಿ ಹೈಕಮಾಂಡ್ ಜತೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಸುಧಾಕರ್ ಭೇಟಿ ಮಹತ್ವ ಪಡೆದುಕೊಂಡಿದೆ.

ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಂಡರೆ ತಮ್ಮನ್ನು ಬೆಂಬಲಿಸುವಂತೆ ಸುಧಾಕರ್ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರಲ್ಲಿ ಮನವಿ ಮಾಡಿಕೊಂಡರು ಎಂದು ಮೂಲಗಳು ಹೇಳಿವೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವದರಿಂದ ಸುಧಾಕರ್ ಲೋಕಸಭೆ ಚುನಾವಣೆಗೆ ಲಾಬಿ ತೀವ್ರಗೊಳಿಸಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಕ್ಕಲಿಗ ಮತ ಪ್ರಾಬಲ್ಯ ಇರುವುದರಿಂದ ಹಾಗೂ ಮೈತ್ರಿ ಕಾರಣ ಜೆಡಿಎಸ್ ಸಂಭಾವ್ಯ ಕ್ಷೇತ್ರಗಳಲ್ಲಿ ಚಿಕ್ಕಬಳ್ಳಾಪುರ ಕೂಡ ಇರುವುದರಿಂದ ಡಾ.ಸುಧಾಕರ್ ಜೆಡಿಎಸ್ ವರಿಷ್ಠರ ಭೇಟಿ ಕುತೂಹಲ ಕೆರಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net