

ಮೈಸೂರು: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ, ಚಳಿಗಾಲ ಅಧಿವೇಶನದಲ್ಲಿ ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕುವುದಾಗಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ನಾಗೇಂದ್ರ, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಕಳೆದ 3 ತಿಂಗಳಿನಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಸದ್ಯದಲ್ಲೇ ಸಿಹಿ ಸುದ್ದಿ ನೀಡುತ್ತೇವೆ ಎಂದು ಹೇಳುವ ಮೂಲಕ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ಮಂಡ್ಯದಲ್ಲಿ 19 ದಿನಗಳಿಂದ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಸಚಿವರು ಹಾಗೂ ಬಿಜೆಪಿ ಮುಖಂಡರು ಧರಣಿ ಸ್ಥಳದ ಮುಂದೆ ಓಡಾಡದೆ ಬೇರೆ ದಾರಿಯಲ್ಲಿ ಓಡಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕಾರ ಭತ್ತಕ್ಕೆ ನಿಗದಿ ಮಾಡಿರುವ ಎಂಎಫ್ಸಿ ಜತೆಗೆ ರಾಜ್ಯ ಸರ್ಕಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಮಾತ್ರ ಪ್ರತಿ ಕ್ವಿಂಟಾಲ್ಗೆ 500 ರೂ. ಪ್ರೋತ್ಸಾಹಧನ ನೀಡುತ್ತಿದೆ. ಇದನ್ನು ರಾಜ್ಯದ ಎಲ್ಲ ಭತ್ತ ಬೆಳೆಗಾರರಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ರೈತರು ದೆಹಲಿಯಲ್ಲಿ ನಡೆಸಿದ ಚರಿತ್ರಾರ್ಹ ಹೋರಾಟ ನ.26ಕ್ಕೆ ಎರಡು ವರ್ಷ ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ನ. 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಲಾಗುವುದು ಎಂದರು.