ಅಧಿಕಾರಿಗಳು, ಗುತ್ತಿಗೆದಾರರಿಗೆ ಆತ್ಮಹತ್ಯೆ ಗ್ಯಾರಂಟಿ ಭಾಗ್ಯ: ಆರ್.ಅಶೋಕ್ ಆಕ್ರೋಶ | Minister Priyank Kharge must resign

R Ashok
Published on

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಆಧಿಕಾರಕ್ಕೆ ಬಂದಾಗ, ಸಿದ್ದರಾಮಯ್ಯ ಮುಖ್ಯಮಂತ್ರಿಯಾದಾಗಲೆಲ್ಲ ಪ್ರಾಮಾಣಿಕ ಅಧಿಕಾರಿಗಳಿಗೆ ಕಿರುಕುಳ ಭಾಗ್ಯ, ಆತ್ಮಹತ್ಯೆ ಗ್ಯಾರಂಟಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಲಂಚಕೋರತನಕ್ಕೆ ಬೇಸತ್ತು ದಾವಣಗೆರೆಯ ಗುತ್ತಿಗೆದಾರ ಪಿ.ಸಿ.ಗೌಡರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಪ್ರಕರಣದ ತನಿಖೆ ಮುಗಿಯುವ ಮುನ್ನವೇ ಬೀದರ್ ಜಿಲ್ಲೆ ಗುತ್ತಿಗೆದಾರ ಸಚಿನ್ ಪಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಕಲಬುರಗಿ ಕಾಂಗ್ರೆಸ್ ಮುಖಂಡರ ರಾಜು ಕಪನೂರು ಸೇರಿ ಎಂಟು ಮಂದಿ ಹಣಕ್ಕೆ ಬೇಡಿಕೆಯಿಟ್ಟು ಕೊಲೆ ಬೆದರಿಕೆ ಹಾಕಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಸಚಿನ್ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ.

ಗುತ್ತಿಗೆದಾರರಿಬ್ಬರ ಆತ್ಮಹತ್ಯೆಗೆ ಕಾರಣವಾಗಿರುವ ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಬೇಕು ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net