ವಿಧಾನಸಭಾ ಚುನಾವಣೆಗೆ ಸ್ಪರ್ಧೆ! ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಿಷ್ಟು…

Sumalatha
Published on

ಮಂಡ್ಯ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿದೆ. ಸ್ವಾಭಿಮಾನದ ಹೆಸರಿನಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ್ದ ಸಂಸದೆ ಸುಮಲತಾ ಅಂಬರೀಷ್, ರಾಷ್ಟ್ರ ರಾಜಕಾರಣದಿಂದ ರಾಜ್ಯ ರಾಜಕಾರಣದತ್ತ ಮುಖ ಮಾಡಲು ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ. ಅವರ ಮಾತುಗಳು ಕೂಡ ಇದಕ್ಕೆ ಪುಷ್ಟಿ ನೀಡಿದೆ.

ಹೌದು, ವಿಧಾನಸಭಾ ಚುನಾವಣೆಗೆ ಸಂಸದೆ ಸುಮಲತಾ ಅಂಬರೀಷ್ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಮಂಡ್ಯದಿಂದ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಲು ಸುಮಲತಾ ಅವರು ಸದ್ದಿಲ್ಲದೆ ತಯಾರಿ ನಡೆಸಿದ್ದು, ಇದರ ಸುಳಿವು ಬಿಟ್ಟುಕೊಟ್ಟಿದ್ದಾರೆ. ಸ್ವಾಭಿಮಾನದ ಹೆಸರಿನಲ್ಲಿ ಪಕ್ಷೇತರ ಸಂಸದೆಯಾಗಿ ಆಯ್ಕೆಯಾಗಿದ್ದ ಸುಮಲತಾ, ಈಗ MLA ಚುನಾವಣೆಗೆ ಸ್ಪರ್ಧಿಸಲು ಮನಸ್ಸು ಮಾಡಿದ್ದಾರೆ. ಇಷ್ಟು ದಿನ ಚುನಾವಣೆಗೆ ಸ್ಪರ್ಧೆ ಇಲ್ಲ ಎನ್ನುತ್ತಿದ್ದವರು ಈಗ ಬೇರೆ ಮಾತುಗಳನ್ನಾಡುತ್ತಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜಕಾರಣದಲ್ಲಿ ಏನನ್ನೂ ಖಂಡಿತವಾಗಿ ಇಲ್ಲ ಅಂತ ಹೇಳೋದಕ್ಕೆ ಆಗೋದಿಲ್ಲ. ವಿಧಾನಸಭಾ ಚುನಾವಣೆಗೆ ಇನ್ನೂ ಟೈಮ್ ಇದೆ. ದೇವರು ಏನೇನು ಬರೆದಿದ್ದಾನೋ ಗೊತ್ತಿಲ್ಲ, ಒಂದಷ್ಟು ಬೆಂಬಲಿಗರು, ಆಪ್ತರು ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವಂತೆ ನನ್ನ ಜೊತೆ ಮಾತನಾಡಿದ್ದಾರೆ. ಒಂದಿಷ್ಟು ಕ್ಷೇತ್ರಗಳಲ್ಲಿ ಕಾರ್ಯಕರ್ತರು ಆಸೆ ಪಡುತ್ತಿದ್ದಾರೆ. ನೋಡೋಣ, ಯಾವುದು ಏನಾಗುತ್ತೆ ಅಂತ ಹೇಳೋದಕ್ಕೆ ಆಗಲ್ಲ. ಸಂದರ್ಭ ಬಂದರೆ ಚುನಾವಣೆಗೆ ನಿಲ್ಲಬಹುದೇನೋ? ಎನ್ನುವ ಮೂಲಕ ಸ್ಪರ್ಧೆಯ ಸುಳಿವು ನೀಡಿದ್ದಾರೆ.

ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸುಮಲತಾ ಅವರು ನೀಡಿರುವ ಹೇಳಿಕೆ ಮಂಡ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net