

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Money Laundering Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿದ್ದ ತಮಿಳುನಾಡು ಡಿಎಂಕೆ ಸರ್ಕಾರದ ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಕೋರ್ಟ್ (supreme court) ಗುರುವಾರ (ಸೆಪ್ಟೆಂಬರ್ 26) ಜಾಮೀನು ಮಂಜೂರು ಮಾಡಿದೆ.
ಸೆಂಥಿಲ್ ಬಾಲಾಜಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಅಭಯ್ ಎಸ್. ಓಕಾ ಮತ್ತು ಆಗಸ್ಟೀನ್ ಜಾರ್ಜ್ ಅವರಿದ್ದ ದ್ವಿಸದಸ್ಯ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಬೇಲ್ ಮಂಜೂರು ಮಾಡಿದೆ.
2011 ರಿಂದ 2015ರಲ್ಲಿ ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ಸೆಂಥಿಲ್ ಅವರು ಉದ್ಯೋಗ ಕೊಡಿಸುವುದಾಗಿ ಲಂಚ ಪಡೆದಿದ್ದಾರೆ ಎಂಬ ಆರೋಪದಲ್ಲಿ 2023ರ ಜೂನ್ 14ರಂದು ಇ.ಡಿ. ಅಧಿಕಾರಿಗಳು ಬಂಧಿಸಿದ್ದರು. ಇ.ಡಿ., ಆಗಸ್ಟ್ 12ರಂದು ಬಾಲಾಜಿ ವಿರುದ್ಧ 3,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತ್ತು. ಸೆಂಥಿಲ್ ಅವರು 2018ರಲ್ಲಿ ಡಿಎಂಕೆ ಸೇರಿದ್ದರು. 2021ರಲ್ಲಿ ಅಸ್ತಿತ್ವಕ್ಕೆ ಬಂದ ಡಿಎಂಕೆ ಸರ್ಕಾರದಲ್ಲಿ ಸಚಿವರಾಗಿ ನೇಕಗೊಂಡಿದ್ದರು.