

ನವದೆಹಲಿ: ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗಳಿಗೆ ಮಾಹಿತಿ ಒದಗಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಷಾ, ತಮ್ಮ ವಿರುದ್ಧ ಕೇಸ್ ದಾಖಲಿಸಲು ಮಧ್ಯಪ್ರದೇಶ ಹೈ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿದೆ.
ದೇಶ ಹಾದುಹೋಗುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ, ಜವಾಬ್ದಾರಿಯುತ ಸ್ಥಾನದಲ್ಲಿರುವವರು ಆಡುವ ಪ್ರತಿ ಮಾತಿಗೂ ಅರ್ಥವಿರಬೇಕು ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹಾಗೂ ನ್ಯಾ. ಆಗಸ್ಟಿನ್ ಜಾರ್ಜ್ ಮಸಿಹ್ ಇದ್ದ ಪೀಠ ಷಾ ಅವರನ್ನು ತರಾಟೆಗೆ ತೆಗೆದುಕೊಂಡಿತು. ‘ನೀವು ಯಾವ ರೀತಿಯ ಹೇಳಿಕೆಗಳನ್ನು ಕೊಡುತ್ತಿದ್ದೀರಿ. ನೀವು ಸರ್ಕಾರದಲ್ಲಿ ಒಬ್ಬ ಜವಾಬ್ದಾರಿಯುತ ಸಚಿವರಾಗಿದ್ದೀರಿ’ ಎಂದು ಅವರ ವಕೀಲರಿಗೆ ಪೀಠ ಹೇಳಿತು. ಖುರೇಷಿ ನಿಂದಿಸಿ ಹೇಳಿಕೆ ನೀಡಿದ್ದ ಷಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಸ್ವಪ್ರೇರಿತವಾಗಿ ಆದೇಶಿಸಿತ್ತು. ಅದನ್ನು ಪ್ರಶ್ನಿಸಿ ಷಾ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ.
ಪೊಲೀಸರು ಸಲ್ಲಿಸಿದ ಎಫ್ಐಆರ್ ಕುರಿತು ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮಧ್ಯಪ್ರದೇಶ ಹೈಕೋರ್ಟ್, ಪ್ರಕರಣ ಸಂಬಂಧ ಪೊಲೀಸರು ಸಮಗ್ರ ವಿವರ ಸೇರಿಸಬೇಕು ಎಂದು ನಿರ್ದೇಶನ ನೀಡಿದೆ.