ಯೂರಿಯಾ ಪೂರೈಸುವಂತೆ ಕೇಂದ್ರಕ್ಕೆ ಸುರ್ಜೇವಾಲ ಪತ್ರ

Ranadeep Surjewala
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ
Published on

ಬೆಂಗಳೂರು: ಕರ್ನಾಟಕಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾವನ್ನು ತ್ವರಿತವಾಗಿ ಪೂರೈಕೆ ಮಾಡುವಂತೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್‌ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಒತ್ತಾಯಿಸಿದ್ದಾರೆ.

ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿರುವ ಸುರ್ಜೇವಾಲಾ, ಕರ್ನಾಟಕದಲ್ಲಿ ಮುಂಗಾರು ಬೇಗ ಪ್ರಾರಂಭವಾಗಿದ್ದು ಸರಾಸರಿಗಿಂತ ಶೇ.3 ಹೆಚ್ಚು ಮಳೆಯಾಗಿದೆ. ಬಿತ್ತನೆ ಸಹ ನಿರೀಕ್ಷೆಗೂ ಮುಂಚೆ ಚಾಲನೆಯಾಗಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 114.40 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. 160.68 ಲಕ್ಷ ಟನ್ ಆಹಾರಧಾನ್ಯಗಳು ಮತ್ತು ಎಣ್ಣೆಕಾಳುಗಳ ಉತ್ಪಾದನಾ ಗುರಿ ಹೊಂದಲಾಗಿದೆ. ಮುಂಗಾರು ಹಂಗಾಮಿಗೆ 82.50 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು 81.85 ಲಕ್ಷ ಹೆಕ್ಟೇರ್ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ 26.77 ಲಕ್ಷ ಮೆಟ್ರಿಕ್ ಟನ್ ವಿವಿಧ ರಸಾಯನಿಕ ರಸಗೊಬ್ಬರಗಳ ಬೇಡಿಕೆ ಅಂದಾಜಿಸಲಾಗಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದಿಂದ ರಸಗೊಬ್ಬರ ಪೂರೈಕೆಯಲ್ಲಿ ಆಗಿರುವ ಕೊರತೆಯಿಂದ ಕರ್ನಾಟಕದಲ್ಲಿ ಸಮಸ್ಯೆ ಸೃಷ್ಟಿಯಾಗಿದೆ. ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕಕ್ಕೆ ಪೂರೈಸಬೇಕಿದ್ದ ಯೂರಿಯಾವನ್ನು ಆದಷ್ಟು ಬೇಗ ಪೂರೈಸಬೇಕೆಂದು ರಾಜ್ಯದ ರೈತರ ಪರವಾಗಿ ಒತ್ತಾಯಿಸುತ್ತಿದ್ದೇನೆ ಎಂದು ಪತ್ರದಲ್ಲಿ ಸರ್ಜೇವಾಲಾ ಉಲ್ಲೇಖ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net