

ಪಟನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಸಂಭವಿಸಿದ ದಿನದಿಂದ ಈ ಪ್ರಕರಣ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಲೇ ಇದೆ. ಮುಂಬೈ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ.
ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಿಂದಲೇ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಹೀಗಿದ್ದರೂ ಚಿತ್ರೋದ್ಯಮದ ಹಲವು ಗಣ್ಯರು, ರಾಜಕಾರಣಿಗಳು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸುತ್ತಲೇ ಬಂದಿದ್ದಾರೆ.
ಇದೀಗ ಸುಶಾಂತ್ ಸಿಂಗ್ ತಂದೆ ಕೆ.ಕೆ. ಸಿಂಗ್ ಕೂಡ ಕೇಸ್ಅನ್ನು ಸಿಬಿಐಗೆ ವಹಿಸಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಇಷ್ಟು ದಿನ ಮೌನವಾಗಿದ್ದ ಅವರಿಗೆ ಸುಶಾಂತ್ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ನನ್ನ ಮಗನ ಆತ್ಮ ಪರಿತಪಿಸುತ್ತಿದೆ. ಸಿಬಿಐ ತನಿಖೆಗಾಗಿ ಒತ್ತಾಯಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸುಶಾಂತ್ ಸಿಂಗ್ ಧೈರ್ಯಶಾಲಿ. ಆತ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ನನಗೆ ತಿಳಿದಿದೆ. ಆತನ ಸಾವು ಕೊಲೆಯಾಗಿದ್ದರೂ ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಈ ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಮನವಿ ಮಾಡುವುದಾಗಿ ಇನ್ನೊಂದು ಟ್ವಿಟ್ನಲ್ಲಿ ಹೇಳಿದ್ದಾರೆ.
ಸುಶಾಂತ್ ಸಿಂಗ್ ಸಾವು ಜೂ.14ರಂದು ಸಂಭವಿಸಿತ್ತು. ಮುಂಬೈನ ಬಾಂದ್ರಾದ ಮನೆಯಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.