

ನವದೆಹಲಿ: ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಸೋಮವಾರ (ಮೇ 27) ತಿರಸ್ಕರಿಸಿದೆ.
ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸೋಮವಾರ ಸಂಜೆಯವರೆಗೆ ಕಾಯ್ದಿರಿಸಿತ್ತು.
ವಾದ- ಪ್ರತಿವಾದ ಆಲಿಸಿದ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಅರ್ಜಿಯನ್ನು ವಜಾ ಮಾಡಿದ್ದಾರೆ. ಬಿಭವ್ ಬಿಡುಗಡೆಯಾದರೆ ತಮ್ಮ ಜೀವಕ್ಕೆ ಅಪಾಯವಿದೆ. ಹಾಗೂ ಕುಟುಂಬಕ್ಕೂ ಸಂಕಷ್ಟ ಎದುರಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಅವಹೇಳನಕಾರಿ ವಿಡಿಯೋಗಳನ್ನು ಯೂಟ್ಯೂಬರ್ ಧ್ರುವ್ ರಾಠೆ ಹಂಚಿಕೊಂಡಿದ್ದಾರೆ, ಇದರಿಂದ ಬೆದರಿಕೆ ಸಂದೇಶಗಳು ಬರಲಾರಂಭಿಸಿವೆ ಎಂದು ಹೇಳಿದ್ದಾರೆ.
ಮೇ 13 ರಂದು ಮುಖ್ಯಮಂತ್ರಿಯವರ ನಿವಾಸದಲ್ಲಿ ಎಎಪಿ ರಾಜ್ಯಸಭಾ ಸದಸ್ಯೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕುಮಾರ್ ಅವರನ್ನು ಮೇ 24 ರಂದು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿದ್ದಾರೆ.