ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಿ

20BTP001
ಚಪ್ಪರದಹಳ್ಳಿ ಗ್ರಾಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ನೋಂದಾಯಿತ ಕಾರ್ಮಿಕರಿಗೆ ಆರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು.
Published on

ಬೆಟ್ಟದಪುರ: ಗ್ರಾಮೀಣ ಜನರ ಆರೋಗ್ಯ ರಕ್ಷಣೆಗೆ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗಿವೆ. ಗ್ರಾಮಗಳಲ್ಲಿ ಆಯೋಜಿಸುವ ಇಂತಹ ಶಿಬಿರಗಳ ಪ್ರಯೋಜನವನ್ನು ಪ್ರತಿಯೊಬ್ಬ ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಕಾರ್ಮಿಕ ಇಲಾಖೆಯ ತಾಲೂಕು ಕಾರ್ಮಿಕ ನಿರೀಕ್ಷಕ ಮಂಜುನಾಥ್ ಹೇಳಿದರು.

ಬೆಟ್ಟದಪುರ ಸಮೀಪದ ಚಪ್ಪರದಹಳ್ಳಿ ಗ್ರಾಮದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಇಲಾಖೆ ಪಿರಿಯಾಪಟ್ಟಣ ಹಾಗೂ ಕರ್ನಾಟಕ ರಾಜ್ಯ ನವೋದಯ ಕಟ್ಟಡ ಹಾಗೂ ಕೂಲಿ ಕಾರ್ಮಿಕರ ಸಂಘಟನೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ನೋಂದಾಯಿತ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಅವರು, ಕೆಲವೊಂದು ಕಾಯಿಲೆಗಳು ಮಾನವನಿಗೆ ಮಾರಕವಾಗಿದ್ದು, ಈಗಿನ ಪರಿಸ್ಥಿತಿಯಲ್ಲಿ ಸಣ್ಣ ಜ್ವರವನ್ನು ನಿರ್ಲಕ್ಷ್ಯ ಮಾಡಬಾರದು. ಕಾರ್ಮಿಕರು ತೆಗೆದುಕೊಳ್ಳುವ ಊಟ, ಅವರ ಜೀವನ ಶೈಲಿಯೂ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಜತೆಗೆ ರಕ್ತದೊತ್ತಡ, ಮಧುಮೇಹದಂತಹ ಕಾಯಿಲೆಗಳು ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿವೆ. ಹಾಗಾಗಿ ಸರ್ಕಾರ ಹಾಗೂ ಇಲಾಖೆಯು ಇಂತಹ ಶಿಬಿರಗಳನ್ನು ಆಯೋಜಿಸರುವ ಮೂಲಕ ಆರೋಗ್ಯದ ಮೇಲೆ ಹೆಚ್ಚು ನಿಗಾವಹಿಸುತ್ತಿದೆ. ಇದರ ಜತೆಗೆ ಪ್ರತಿಯೊಬ್ಬರೂ ಆರೋಗ್ಯದ ಕಡೆ ಹೆಚ್ಚು ಗಮನ ಕೊಡಬೇಕು ಎಂದರು.

ಶಿಬಿರದಲ್ಲಿ ಸುಮಾರು 65ಕ್ಕೂ ಹೆಚ್ಚು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಕಾರ್ಮಿಕ ಇಲಾಖೆಯ ಡಿಇಒ ಅಂಜಲಿ, ರಾಜ್ಯ ನವೋದಯ ಕಟ್ಟಡ, ಕೂಲಿ ಕಾರ್ಮಿಕರ ಸಂಘಟನೆ ತಾಲೂಕು ಅಧ್ಯಕ್ಷ ಪ್ರಕಾಶ್, ಸೇರಿದಂತೆ ಕಾರ್ಮಿಕ ಮುಖಂಡರು, ಸಿಬ್ಬಂದಿ ಮತ್ತು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net