

ಗೋಣಿಕೊಪ್ಪಲು : ಮಹಿಳೆಯರು ಪ್ರತಿಯೊಂದು ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವ ಮೂಲಕ ಸಾಧನೆ ಮಾಡುತ್ತಿದ್ದಾರೆ ಎಂದು ಹುದಿಕೇರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿವ್ಯಾ ಕಾವೇರಮ್ಮ ಹೇಳಿದರು.
ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಗ್ರಾಮ ಪಂಚಾಯಿತಿ ವತಿಯಿಂದ ಕೊಡವ ಸಮಾಜದ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ಗ್ರಾಮ ಪಂಚಾಯಿತಿಯಲ್ಲಿ ದೊರೆಯುವ ಸೌಲಭ್ಯಗಳ ಸದುಪಯೋಗ ಪಡೆಯಬೇಕು, ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದ ಅವರು, ಇದೇ ಸಂದರ್ಭದಲ್ಲಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಭರವಸೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪುಟ್ಟರಾಜು ಮಾತನಾಡಿ, ಪಂಚಾಯಿತಿ ವತಿಯಿಂದ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಕ್ಕೆಸೊಡ್ಲೂರು ಶಾಲೆಯಲ್ಲಿ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗಿದೆ. ಹುದಿಕೇರಿ ಶಾಲೆಯಲ್ಲೂ ಇಂತಹ ಯೋಜನೆ ರೂಪಿಸಲು ಚರ್ಚಿಸಲಾಗುತ್ತಿದೆ. ಪಾಲಕರು ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಇದೇ ಸಂದರ್ಭದಲ್ಲಿ ಎಡಿಎಲ್‌ಆರ್ ಬಾನಂಗಡ ಅರುಣ್ ಅವರನ್ನು ಪಂಚಾಯಿತಿ ವತಿಯಿಂದ ಸನ್ಮಾನಿಸಲಾಯಿತು. ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು, ವೈಯಕ್ತಿಕ ಸ್ವಚ್ಛತೆ, ಮಹಿಳಾ ಮತ್ತು ಮಕ್ಕಳ ಬಜೆಟ್, ಆಶಾ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಣೆ, ಅಂಗನವಾಡಿಗಳಿಗೆ ಪೀಠೋಪಕರಣ ವಿತರಣೆ ಕಾರ್ಯಕ್ರಮ ನಡೆಯಿತು.
ಮಕ್ಕಳ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಿದ್ಯಾರ್ಥಿನಿ ಕೃತಿ ವಹಿಸಿದ್ದರು. ಉಪಾಧ್ಯಕ್ಷೆ ಪಿ. ಚೋಂದು, ಸದಸ್ಯರಾದ ಮಿಲನ್ ಗಣಪತಿ, ಬಾಳೇರ ರೇವತಿ , ಕೊಡಂಗಡ ದಮಯಂತಿ, ಪಿ.ಕಾವೇರಿ, ಕೊಡಂಗಡ ವಾಸು ಬಿದ್ದಪ್ಪ, ಸುನಿಲ್ ಕುಮಾರ್ ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು.