ಜನ ಸುರಕ್ಷಾ ಯೋಜನೆ ಪ್ರಯೋಜನ ಪಡೆದುಕೊಳ್ಳಿ

01sunti03...
ಸುಂಟಿಕೊಪ್ಪ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಕೆನರಾದ ಆರ್ಥಿಕ ಸಮಾಲೋಚಕ ನಬಿ ಮಾತನಾಡಿದರು. ಅನಿಕೇತ್, ವಿ.ಜಿ.ಲೋಕೇಶ್, ಸಿ.ಜಿ.ಹರೀಶ್ ಇದ್ದರು.
Published on

ಸುಂಟಿಕೊಪ್ಪ: ಜನಸಾಮಾನ್ಯರು ಕೇಂದ್ರ ಸರ್ಕಾರದ ಜನ ಸುರಕ್ಷಾ ಯೋಜನೆಗಳ ಗರಿಷ್ಠ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ಸುಂಟಿಕೊಪ್ಪ ಕೆನರಾ ಬ್ಯಾಂಕಿನ ವ್ಯವಸ್ಥಾಪಕ ಅನಿಕೇತ್ ಕರೆ ನೀಡಿದರು.

ಸೋಮವಾರ ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಕೆನರಾ ಮಡಿಕೇರಿ ಸಹಯೋಗದೊಂದಿಗೆ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಗ್ರಾಮದಲ್ಲಿ, ಕೇಂದ್ರ ಸರ್ಕಾರದ ಆದೇಶದಂತೆ ಆಯಾ ಗ್ರಾಮದ ಬ್ಯಾಂಕ್ ಶಾಖೆ ಮುಖಾಂತರ ಪ್ರತಿ ವರ್ಷವೂ ನಡೆಸುವ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮವನ್ನು ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಅನಿಕೇತ್ ಮಾತನಾಡಿ, ಜನಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವುದರ ಮೂಲಕ ಅದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆ ಅಪಘಾತ ವಿಮೆಯಾಗಿದ್ದು ವಾರ್ಷಿಕ 20 ರೂ.ಗಳನ್ನು ಪಾವತಿಸಿ ಈ ಯೋಜನೆ ಮಾಡಿಸಿಕೊಂಡಲ್ಲಿ ಯಾವುದೇ ರೀತಿಯ ಅಪಘಾತ ಸಂಭವಿಸಿದಲ್ಲಿ 2 ಲಕ್ಷ ರೂ.ವರೆಗಿನ ವಿಮಾ ಮೊತ್ತವು ಗ್ರಾಹಕರ ನಾಮಿನಿಗೆ ಸಿಗುವುದಾಗಿ ಮಾಹಿತಿ ನೀಡಿದರು. ವಾರ್ಷಿಕವಾಗಿ 436 ರೂ. ಪಾವತಿಸಿ ಪ್ರಧಾನಮಂತ್ರಿ ಜೀವನ ಜ್ಯೋತಿ ವಿಮೆಯನ್ನು ಮಾಡಿಸಿಕೊಂಡಲ್ಲಿ ಯಾವುದೇ ರೀತಿಯಲ್ಲಿ ಮರಣ ಹೊಂದಿದರೆ ಅಂತವರ ನಾಮಿನಿಗೆ 2 ಲಕ್ಷ ರೂ. ವಿಮಾ ಮೊತ್ತ ಸಿಗುವುದಾಗಿ ತಿಳಿಸಿದರು. ಎರಡನ್ನೂ ಮಾಡಿಸಿಕೊಂಡಲ್ಲಿ 4 ಲಕ್ಷ ರೂ.ವರೆಗಿನ ವಿಮಾ ಮೊತ್ತ ಸಿಗುವುದಾಗಿ ಮಾಹಿತಿ ನೀಡಿದರು. ಅಲ್ಲದೆ 60 ವಯಸ್ಸು ಆದ ನಂತರದಲ್ಲಿ ಪಿಂಚಣಿ ರೂಪದಲ್ಲಿ 1000 ರೂ. ಗಳಿಂದ 5000 ರೂ.ವರೆಗಿನ ಪಿಂಚಣಿ ಸಿಗಬೇಕಾದರೆ ಅಟಲ್ ಪಿಂಚಣಿ ಯೋಜನೆ ಮಾಡಿಸುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಮಾತನಾಡಿದರು. ಆರ್ಥಿಕ ಸಮಾಲೋಚಕರಾದ ನಬಿ ಮತ್ತು ಸಿ.ಜಿ.ಹರೀಶ್ ಬ್ಯಾಂಕಿನ ಸೌಲಭ್ಯಗಳ ಕುರಿತು ಮಾಹಿತಿ ಒದಗಿಸಿದರು. ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net