ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪರೀಕ್ಷೆ ನಡೆಸಿ ; ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ

08TMK_JCM_SSLC 1
Published on

ತುಮಕೂರು : ಜುಲೈ 19 ರಿಂದ 22ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸರ್ಕಾರದ ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಪರೀಕ್ಷೆ ನಡೆಸುವುದು ಕೇವಲ ಶಿಕ್ಷಣ ಇಲಾಖೆ ಕರ್ತವ್ಯ ಎಂದು ಪರಿಗಣಿಸದೆ ಎಲ್ಲ ಇಲಾಖೆಗಳು ಸಹಕಾರ ನೀಡಬೇಕು, ವಿದ್ಯಾರ್ಥಿಗಳಿಗೆ ಎಲ್ಲಿಯೂ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದರು.

ಕರೊನಾ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು, ಪರೀಕ್ಷಾ ಕೇಂದ್ರಗಳಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಬೇಕು, ಪರೀಕ್ಷೆ ಪೂರ್ವದಲ್ಲಿ ಹಾಗೂ ನಂತರ ಪರೀಕ್ಷಾ ಕೇಂದ್ರದ ಎಲ್ಲ ಕೊಠಡಿ, ಪೀಠೋಪಕರಣ ಹಾಗೂ ಇನ್ನಿತರ ವಸ್ತುಗಳನ್ನು ಸ್ಯಾನಿಟೈಜ್ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದರು.

ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಸಿಬ್ಬಂದಿ, ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರೀಕ್ಷಾ ದಿನದಂದು ಬೆಳಗ್ಗೆ 7.30ಕ್ಕೆ ಹಾಜರಾಗಿ ಪರೀಕ್ಷಾ ಕೇಂದ್ರಗಳನ್ನು ತೆರೆಯಬೇಕು, ಎಸ್ಸೆಸ್ಸೆಲ್ಸಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಮತ್ತು ಶಿಕ್ಷಕರಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಲಸಿಕೆ ಪಡೆಯದ ಹೊರತು ಕರ್ತವ್ಯಕ್ಕೆ ನಿಯೋಜನೆ ಮಾಡುವಂತಿಲ್ಲ ಎಂದು ಸೂಚಿಸಿದರು.

ಯಾವುದೇ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗದಂತೆ ಕ್ರಮ ವಹಿಸುವುದು ಸೇರಿ ಕರೊನಾ ತಾಂತ್ರಿಕ ಸಲಹಾ ಸಮಿತಿ ರೂಪಿಸಿದ ಎಸ್‌ಒಪಿ ಅನುಷ್ಠಾನದಂತೆ ಸಿದ್ಧತೆ ಕೈಕೊಂಡು ಅಗತ್ಯವಿರುವ ಮಕ್ಕಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ತಿಳಿಸಿದರು.

ಮಕ್ಕಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಆರಂಭವಾಗುವ ನಿಗದಿತ ಸಮಯಕ್ಕೆ ಮುಂಚಿತವಾಗಿಯೇ ಬಂದು ಪರೀಕ್ಷೆ ಮುಕ್ತಾಯದ ಬಳಿಕ ತೆರಳುತ್ತಾರೆ. ಹಾಗಾಗಿ ಮಕ್ಕಳು ಹಸಿವಿನಿಂದ ಬಳಲಬಾರದೆಂಬ ನಿಟ್ಟಿನಲ್ಲಿ ಅನಿವಾರ್ಯವಿರುವ ಮಕ್ಕಳಿಗೆ ಊಟದ ವ್ಯವಸ್ಥೆಯನ್ನೂ ಮಾಡಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಜವಾಬ್ದಾರಿಯಿಂದ ಪ್ರಶ್ನೆಪತ್ರಿಕೆ ರವಾನಿಸಬೇಕು. ತಹಸೀಲ್ದಾರ್ ಹಾಗೂ ಇಒಗಳು ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಪ್ರಶ್ನೆಪತ್ರಿಕೆ ರವಾನೆಗೆ ಸೂಕ್ತ ಕ್ರಮ ವಹಿಸುವಂತೆ ನಿರ್ದೇಶಿಸಿದರು. ಜಿಪಂ ಸಿಇಒ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುವಾರ್ ಶಹಾಪುರವಾಡ್ ಸೇರಿದಂತೆ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್‌ಗಳು ಇದ್ದರು.

36530 ಮಕ್ಕಳ ನೋಂದಣಿ : ತುಮಕೂರು(ದ) ಶೈಕ್ಷಣಿಕ ಜಿಲ್ಲೆಯಲ್ಲಿ 90 ಕ್ಲಸ್ಟರ್ ಸಹಿತ ಹಾಗೂ 49 ಕ್ಲಸ್ಟರ್ ರಹಿತ ಸೇರಿ 139 ಪರೀಕ್ಷಾ ಕೇಂದ್ರಗಳಿದ್ದು, ಪರೀಕ್ಷೆಗೆ 23685 ವಿದ್ಯಾರ್ಥಿಗಳು ನೋಂದಣಿ ವಾಡಿಕೊಂಡಿದ್ದಾರೆ. ಅಂತೆಯೇ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 32 ಕ್ಲಸ್ಟರ್ ಸಹಿತ ಹಾಗೂ 49 ಕ್ಲಸ್ಟರ್ ರಹಿತ ಸೇರಿ ಒಟ್ಟು 81 ಕೇಂದ್ರಗಳಿದ್ದು, 12845 ವಿದ್ಯಾರ್ಥಿಗಳು ನೋಂದಣಿಯಾಗಿದ್ದು ಪರೀಕ್ಷೆ ಬರೆಯಲಿದ್ದಾರೆ. ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ 122 ಕ್ಲಸ್ಟರ್ ಸಹಿತ ಹಾಗೂ 98 ಕ್ಲಸ್ಟರ್ ರಹಿತ ಸೇರಿ ಒಟ್ಟು 220 ಪರೀಕ್ಷಾ ಕೇಂದ್ರಗಳಿದ್ದು, 36530 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ವಾಡಿಕೊಂಡಿದ್ದಾರೆ. ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ 7 ಕ್ಲಸ್ಟರ್ ಸಹಿತ, 11ಕ್ಲಸ್ಟರ್ ರಹಿತ ಸೇರಿ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ 2534 ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ ಎಂದು ಡಿಡಿಪಿಐ ಸಭೆಗೆ ವಾಹಿತಿ ನೀಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜವಾಬ್ದಾರಿಯಿಂದ ಸುಸೂತ್ರವಾಗಿ ನಡೆಸಬೇಕು, ನಿಯವಾನುಸಾರ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆ ರವಾನೆ ವಾಡಬೇಕು, ಪರೀಕ್ಷಾ ಕೇಂದ್ರದಲ್ಲಿಯೂ ನಿಯವಾನುಸಾರವೇ ಪ್ರಶ್ನೆಪತ್ರಿಕೆ ತೆರೆಯಬೇಕು. ಲಸಿಕೆ ಪಡೆದವರನ್ನು ವಾತ್ರ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಬೇಕು. ವೈ.ಎಸ್.ಪಾಟೀಲ ಜಿಲ್ಲಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net