

ಬೆಂಗಳೂರು: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವ ಇದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿಗೆ ಹಸ್ತಾಂತರಿಸಲು ಸರ್ಕಾರ ಮುಂದಾಗಿದ್ದು, ಗ್ರಾಮೀಣಾಭಿವೃದ್ಧಿ ಅಧ್ಯಯನ ಕ್ಷೇತ್ರದಲ್ಲೂ ಅನಗತ್ಯ ರಾಜಕೀಯ ಹಸ್ತಕ್ಷೇಪಕ್ಕೆ ದಾರಿಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲ ತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿರುವ ಅವರು, ಶಿಕ್ಷಣದಲ್ಲಿ ರಾಜಕೀಯ ಬೆರೆಯಬಾರದು ಎಂಬ ಸದುದ್ದೇಶದಿಂದ ಸಂವಿಧಾನದ ಆಶಯಕ್ಕೆ ಪೂರಕವಾಗಿ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರೂ ಆದ ರಾಜ್ಯಪಾಲರೇ ವಿಶ್ವ ವಿದ್ಯಾಲಯಗಳ ಕುಲಾಧಿಪತಿಗಳಾಗಿರುವುದು ಶಿಕ್ಷಣದ ಭೂಷಣ.
ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿದೆ. ಇದರ ನಡುವೆಯೇ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನಗೊಳಿಸಲು ಹೊರಟಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಈ ಮೊದಲಿನಿಂದಲೂ ರಾಜ್ಯಪಾಲರ ಕುರಿತು ಅಸಹನೆ ತೋರುತ್ತಿರುವ ಹಾಗೂ ರಾಜ್ಯಪಾಲರನ್ನು ವೈರಿಯಂತೆ ಕಾಂಗ್ರೆಸ್ ಸರ್ಕಾರ ನೋಡುತ್ತಿದೆ. ರಾಜ್ಯಪಾಲರಿಗಿರುವ ಪರಮಾಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲು ಹೊರಟಿದೆ.
ಸಾಂವಿಧಾನಿಕ ವ್ಯವಸ್ಥೆಯನ್ನು ವಿಚಲಿತಗೊಳಿಸುವ ಹುನ್ನಾರದಿಂದ ಕೂಡಿದೆ. ರಾಜ್ಯ ಸರ್ಕಾರದ ಈ ನಡೆ ಅತ್ಯಂತ ಖಂಡನೀಯ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.