

ಮೈಸೂರು: ಸುಪ್ರೀಂ ಕೋರ್ಟ್ ತೀರ್ಪಿನಂತೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗುರುವಾರ ಪುರಭವನ ಮುಂಭಾಗ ಅಂಬೇಡ್ಕರ್ ಪ್ರತಿಮೆ ಬಳಿ ತಮಟೆ ಚಳವಳಿ ನಡೆಸಲಾಯಿತು.
ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರಗಳಿಗೆ ಸಂವಿಧಾನ ಬದ್ಧವಾದ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಇದು ಕಳೆದ 30 ವರ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದ್ದು, ಮೀಸಲಾತಿ ವ್ಯವಸ್ಥೆಯಲ್ಲಿ ಬಹಳ ಮುಖ್ಯವಾದ ಹೆಜ್ಜೆಯಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠ ಈ ವಿಚಾರದಲ್ಲಿದ್ದ ಗೊಂದಲ ಪರಿಹರಿಸಿದೆ. ಒಳಮೀಸಲಾತಿ ಸಮಾನತೆ ಸಾಧಿಸಲು ಅಗತ್ಯ ಎಂದು ನ್ಯಾಯಾಲಯ ಹೇಳಿದೆ. ಈ ಜಾತಿಗಳ ಒಳಗೆ ಇರುವ ಕೆಲವು ಉಪ ಜಾತಿಗಳಿಗೆ ಮೀಸಲಾತಿಯ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಹೀಗಾಗಿ ಇಂತಹ ಉಪಜಾತಿಗಳು ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿವೆ. ಹಿಂದುಳಿದಿರುವಿಕೆಯ ಆಧಾರದಲ್ಲಿ ಒಳಮೀಸಲಾತಿ ನೀಡಿದರೆ ಈವರೆಗೆ ಮೀಸಲಾತಿಯ ಲಾಭ ಪಡೆದುಕೊಳ್ಳಲು ಸಾಧ್ಯವಾಗದ ಸಮುದಾಯಗಳಿಗೆ ಪ್ರಯೋಜನವಾಗಲಿದೆ. ಹೀಗಾಗಿ ಕೂಡಲೇ ಒಳಮೀಸಲಾತಿ ಜಾರಿಗೊಳಿಸಿ ಎಂದು ಆಗ್ರಹಿಸಿದರು.