

ಶಿವಮೊಗ್ಗ: ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟುಕುವ ದರದಲ್ಲಿ 5ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಗುರಿ ಹೊಂದಿದ್ದೇನೆ ಎಂದು ಸೂಡಾ (ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ) ಅಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿದರು.
ಸೂಡಾ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ನಿವೇಶನ ಹಂಚಿಕೆಯಾಗಿಲ್ಲ. ಹಾಗಾಗಿ ಮುಂದಿನ ದಿನಗಳಲ್ಲಿ ಹೊಸ ಬಡಾವಣೆಗಳನ್ನು ರಚಿಸಿ ಸಾರ್ವಜನಿಕರಿಗೆ, ನಿವೇಶನ ರಹಿತರಿಗೆ, ಬಡವರಿಗೆ ಕೈಗೆಟುಕುವ ದರದಲ್ಲಿ ನಿವೇಶನ ಹಂಚಿಕೆಗೆ ಕ್ರಮ ವಹಿಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಾಧಿಕಾರದಿಂದ ಶಿವಮೊಗ್ಗ ನಗರದ ಊರಗಡೂರು ಗ್ರಾಮದಲ್ಲಿ ವಸತಿ ಬಡಾವಣೆಯನ್ನು ನಿರ್ಮಿಸುತ್ತಿದ್ದು ಸಿವಿಲ್ ಕಾಮಗಾರಿ ಪ್ರಗತಿಯಲ್ಲಿರುತ್ತದೆ. ಕಾಮಗಾರಿಗಳು ಪೂರ್ಣಗೊಂಡ ನಂತರ ಲಭ್ಯವಾಗುವ 684 ನಿವೇಶನಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲು ಅರ್ಜಿ ಆಹ್ವಾನಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.
ಸೋಮಿನಕೊಪ್ಪದ ಜೆ.ಎಚ್.ಪಟೇಲ್ ಬಡಾವಣೆಯಲ್ಲಿ ಲಭ್ಯವಿರುವ 1.09 ಎಕರೆಯಲ್ಲಿ ವಸತಿ ಸಮುಚ್ಚಯ(ಜಿ+3) ನಿರ್ಮಾಣ ಹಾಗೂ ಊರಗಡೂರು ವಸತಿ ಬಡಾವಣೆಯಲ್ಲಿ ಲಭ್ಯವಿರುವ 4 ಎಕರೆ ಜಾಗದಲ್ಲಿ ವಸತಿ ಸಮುಚ್ಚಯ ನಿರ್ಮಾಣ ಮಾಡಲಾಗುವುದು. 2023-24ನೇ ಸಾಲಿನಲ್ಲಿ ಪ್ರಾಧಿಕಾರದಿಂದ ಪ್ರಾಧಿಕಾರದ ಬಡಾವಣೆಗಳಲ್ಲಿ ರಸ್ತೆ ಡಾಂಬರೀಕರಣ, ಒಳಚರಂಡಿ, ಉದ್ಯಾನ ಹಾಗೂ ನಗರದ ಸರ್ಕಲ್ಗಳ ಅಭಿವೃದ್ಧಿ ಇತ್ಯಾದಿ ಕಾಮಗಾರಿಗಳನ್ನು ತೆಗೆದುಕೊಂಡಿದ್ದು 25 ಕೋಟಿ ರೂ. ವೆಚ್ಚದಲ್ಲಿ ಟೆಂಡರ್ ಕರೆದು ಕಾಮಗಾರಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ಪ್ರಾಧಿಕಾರದ ಸ್ಥಳೀಯ ಪ್ರದೇಶಾಭಿವೃದ್ದಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕೆರೆಗಳನ್ನು 35 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ. ಪ್ರಾಧಿಕಾರವು ಮುಂದಿನ ದಿನಗಳಲ್ಲಿ ಆರ್ಥಿಕ ಸದೃಢತೆ ಹೊಂದುವ ನಿಟ್ಟಿನಲ್ಲಿ ಪ್ರಾಧಿಕಾರದ ಬಡಾವಣೆಗಳಲ್ಲಿ ಲಭ್ಯವಿರುವ ವಾಣಿಜ್ಯ ನಿವೇಶನಗಳನ್ನು ಗುರುತಿಸಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ನಗರದ ಪ್ರಮುಖ ವೃತ್ತಗಳನ್ನು ಗುರುತಿಸಿ ಸೌಂದರ್ಯೀಕರಣ ಮತ್ತು ಅಭಿವೃದ್ಧಿ ಮಾಡಲಾಗುವುದು ಎಂದರು.
ಖಾಸಗಿ ಲೇಔಟ್‌ಗಳಿಗೆ ಮೂಲ ಸೌಕರ್ಯ ಒದಗಿಸಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಲ್ಲಿ ಲಭ್ಯವಿರುವ ನಾಗರಿಕ ಸೌಲಭ್ಯ (ಸಿಎ) ನಿವೇಶನಗಳನ್ನು ವಿವಿಧ ಸಂಘ ಸಂಸ್ಥೆಗಳಿಗೆ ಹಂಚಿಕೆ ಮಾಡಲು ಕ್ರಮ ವಹಿಸಲಾಗುವುದು. ಪ್ರಾಧಿಕಾರದಿಂದ ಈಗಾಗಲೇ ಮೂಲೆ, ಮಧ್ಯಂತರ ನಿವೇಶನಗಳನ್ನು ಇ-ಹರಾಜು ಮೂಲಕ ವಿಲೇವಾರಿ ಮಾಡಲು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ ಎಂದರು. ಸೂಡಾ ಆಯುಕ್ತ ವಿಶ್ವನಾಥ ಮುದಜ್ಜಿ, ಎಇಇ ಬಸವರಾಜಪ್ಪ ಸುದ್ದಿಗೋಷ್ಠಿಯಲ್ಲಿದ್ದರು.