

ಎನ್.ಆರ್.ಪುರ: ಎಲ್ಲರೂ ಒಗ್ಗೂಡಿ ಶಿಕ್ಷಕರ ದಿನ ಅರ್ಥಪೂರ್ಣವಾಗಿ ಆಚರಿಸೋಣ ಎಂದು ತಾಪಂ ಇಒ ಎಚ್.ಡಿ.ನವೀನ್‌ಕುಮಾರ್ ತಿಳಿಸಿದರು. ಶಿಕ್ಷಕರ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಕಾಮಗಾರಿಗಳಿಗೆ ಈ ಬಾರಿ ಮೊದಲ ಆದ್ಯತೆ ನೀಡಲಾಗಿದೆ. ಶಾಲಾ ಕಟ್ಟಡ ದುರಸ್ತಿಗೆ ಅನುದಾನ ಮೀಸಲಿರಿಸಲಾಗಿದೆ ಎಂದರು. ಬಿಇಒ ಕೆ.ಆರ್.ಪುಷ್ಪಾ ಮಾತನಾಡಿ, ಶಿಕ್ಷಕರ ದಿನಾಚರಣೆಗೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ನಂಜುಂಡಪ್ಪ ಮಾತನಾಡಿ, ಕಾರ್ಯಕ್ರಮಕ್ಕೆ ಅನುದಾನ ಕ್ರೋಡೀಕರಿಸಬೇಕಾಗುತ್ತದೆ ಎಂದು ತಿಳಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ ಮಾತನಾಡಿ, ತಾಲೂಕಿನ ಮೂರು ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು. ಸಭೆಯಲ್ಲಿ ಪ್ರಾಥಮಿಕ ಶಾಲೆಯ 4 ಶಿಕ್ಷಕರನ್ನು ಹಾಗೂ ಪ್ರೌಢಶಾಲೆಯ 3 ಶಿಕ್ಷಕರನ್ನು ತಾಲೂಕಿನ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲು ನಿರ್ಧರಿಸಲಾಯಿತು. ಪಪಂ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್, ಕೊಟ್ರೇಶಪ್ಪ, ಅಶೋಕ್, ಡಿ.ಎನ್.ಮಂಜುನಾಥ್, ವೆಂಕಟೇಶ್, ರಂಗಪ್ಪ ಇತರರಿದ್ದರು.