

ಬೆಂಗಳೂರು: ಬಿಎಂಟಿಸಿ ಬಸ್ ಕೆಳಗೆ ಸಿಲುಕಿ ಖಾಸಗಿ ಕಂಪನಿ ಉದ್ಯೋಗಿ ಮೃತಪಟ್ಟಿದ್ದಾರೆ.
ಸಂಜಯ್ ನಗರದ ಎಇಸಿಎಸ್ ಲೇಔಟ್ ನಿವಾಸಿ ರೋಷನ್(೩೭) ಮೃತಪಟ್ಟವರು.
ರೋಷನ್ ಅವರು ಖಾಸಗಿ ಕಂಪನಿಯಲ್ಲಿ ಸ್‌ಟಾವೇರ್ ಇಂಜಿನಿಯರ್ ಆಗಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಮಂಗಳವಾರ ಬೆಳಗ್ಗೆ ೧೧ ಗಂಟೆಯ ವೇಳೆ ತಮ್ಮ ಮಗು ಮತ್ತು ಪತ್ನಿಗೆ ಉಪಹಾರ ತರಲು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಬಲಭಾಗದಿಂದ ಕಾರನ್ನು ಓವರ್ ಟೇಕ್ ಮಾಡಲು ಪ್ರಯತ್ನಿಸುವಾಗ ಆಯಾ ತಪ್ಪಿ ಕೆಳಗೆ ಬಿದ್ದಿದ್ದು, ಕೆಳಗೆ ಬಿದ್ದ ಅವರ ಮೇಲೆ ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರಗಳು ಹರಿದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ರೋಷನ್ ಅವರು ತಲೆಗೆ ಹೆಲ್ಮೆಟ್ ಧರಿಸಿದ್ದರು. ಹೀಗಾಗಿ ತಲೆಗೆ ಯಾವುದೇ ಗಾಯವಾಗಿಲ್ಲ. ಆದರೆ ದೇಹದ ಮೇಲೆ ಬಸ್ ಹರಿದ ಪರಿಣಾಮ ತೀವ್ರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಈ ಸಂಬಂಧ ಬಸ್ ಚಾಲಕ ಕಲ್ಲಪ್ಪ ಅವರನ್ನು ಬಂಧಿಸಿ ಠಾಣೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಜಯನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.