

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಅಕ್ರಮವಾಗಿ ನಡೆಸಲಾಗಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಖ್ಯಾತ ತೆಲುಗು ನಟಿ ಹೇಮಾ ಕೊಲ್ಲಂ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದಲ್ಲಿ ಇತ್ತೀಚೆಗೆ ನಡೆದಿದ್ದ ರೇವ್ ಪಾರ್ಟಿಯಲ್ಲಿ ಹೇಮಾ ಡ್ರಗ್ಸ್ ಸೇವಿಸಿದ್ದಾರೆ ಎಂದು ಸುದ್ದಿಯಾಗುತ್ತಿದ್ದಂತೆ ನಟಿ, ಇದೆಲ್ಲಾ ಸುಳ್ಳು ಸುದ್ದಿ ನಾನು ಬೆಂಗಳೂರಿನಲ್ಲಿಲ್ಲ. ಹೈದರಾಬಾದ್ ರೆಸಾರ್ಟ್ವೊಂದರಲ್ಲಿ ಇದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದರು.
ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದು ನಟಿ ಹೇಮಾ ಸಿಸಿಬಿ ಪೊಲೀಸರ ದಾಳಿ ವೇಳೆ ಸಿಕ್ಕಿಬಿದ್ದಿದ್ದರು. ಬಳಿಕ ತಾನು ಡ್ರಗ್ಸ್ ಸೇವಿಸಿಲ್ಲ ಎಂದು ಅವಾಜ್ ಹಾಕಿ, ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನವನ್ನೂ ಮಾಡಿದ್ದರು. ಆದರೆ ಸಿಸಿಬಿ ಪೊಲೀಸರಿಂದ ತಪ್ಪಿಸಿಕೊಳ್ಳಲಾಗದೇ ಕೊನೆಗೆ ರಕ್ತದ ಮಾದರಿ ಕೊಟ್ಟು ಅಲ್ಲಿಂದ ಹೊರಟಿದ್ದರು.
ದಾಳಿ ನಡದ ಬಳಿಕ ಬೆಂಗಳೂರಿನ ಸಿಸಿಬಿ ಪೊಲೀಸರು ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ 103 ಜನರ ರಕ್ತದ ಮಾದರಿ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ನಟಿ ಹೇಮಾ ಸೇರಿದಂತೆ 86 ಮಂದಿ ಡ್ರಗ್ಸ್ ಸೇವನೆ ಮಾಡಿರುವುದು ರಕ್ತದ ಮಾದರಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನಟಿ ಹೇಮಾಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ ವಿಚಾರಣೆಗೆ ಗೈರಾಗಿದ್ದರು. ಬಳಿಕ ಸಿಸಿಬಿ ಪೊಲೀಸರು ನಟಿ ಹೇಮಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಪೊಲೀಸರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಸದ್ಯ ಬಂಧಿಸಿರುವುದು ಸಂಜೆಯಾಗಿರುವುದರಿಂದ ಕೋರ್ಟ್ ಅವಧಿ ಮುಗಿದಿರುವುದರಿಂದ ನಟಿಯನ್ನು ಮಂಗಳವಾರ (ಜೂನ್ 4) ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.(ಏಜೆನ್ಸೀಸ್)