

ಚಿಕ್ಕಮಗಳೂರು: ನೇಕಾರ ಸಮುದಾಯದ ಅಭಿವೃದ್ಧಿಯೇ ನಮ್ಮ ಮುಖ್ಯ ಗುರಿಯಾಗಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಎಚ್.ಎಂ.ನಾರಾಯಣ್ ತಿಳಿಸಿದರು.
ನಗರದ ನೇಕಾರ ಬೀದಿಯ ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದ ಸಭಾಂಗಣದಲ್ಲಿ ಭಾನುವಾರ ಜಿಲ್ಲಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ಬಳಿಕ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದರು.
ಸಮುದಾಯದ ಜನರ ಪ್ರತಿ ಮನೆಗೆ ತೆರಳಿ ಅವರ ಮನವೊಲಿಸಿ ಒಕ್ಕೂಟದ ಸದಸ್ಯರನ್ನಾಗಿ ಮಾಡಲಾಗುವುದು. ಸಮುದಾಯದ ಆರ್ಥಿಕ ಅಭಿವೃದ್ಧಿಗೆ ನೇಕಾರರ ಸಹಕಾರ ಸಂಘ ಸ್ಥಾಪಿಸುತ್ತೇವೆ ಎಂದು ಹೇಳಿದರು.
ಒಕ್ಕೂಟದ ರಾಜ್ಯಾಧ್ಯಕ್ಷ ಬಿ.ಎಸ್.ಸೋಮಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ನೇಕಾರ ಸಮುದಾಯಗಳ ಜನರನ್ನು ಒಗ್ಗೂಡಿಸುವ ಮೂಲಕ ಸಂಘಟನೆಯ ಬಲ ಹೆಚ್ಚಿಸುವಂತೆ ಸಲಹೆ ನೀಡಿದರು.
ನೇಕಾರ ಸಮುದಾಯಗಳ ಒಕ್ಕೂಟದ ಗೌರವಾಧ್ಯಕ್ಷರಾಗಿ ಎಚ್.ಎಲ್.ಶೇಖರಪ್ಪ, ಉಪಾಧ್ಯಕ್ಷರಾಗಿ ಟಿ.ಎನ್.ವಿಶುಕುಮಾರ್ ಆಯ್ಕೆಯಾಗಿದ್ದಾರೆ. ಒಕ್ಕೂಟದ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಶಿವಪ್ಪ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಟಿ.ಶಿವರಾಮ್, ಕಾರ್ಯದರ್ಶಿ ಬಿ.ಎಂ.ಕುಮಾರ್, ಎಚ್.ಸಿ.ಮಂಜುನಾಥ್, ಸಿದ್ದಪ್ಪ ಮತ್ತಿತರರಿದ್ದರು.