

ಬೆಂಗಳೂರು: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿಯಾದ ನಗದು ಹಾಗೂ ವಜ್ರದ ಆಭರಣಗಳನ್ನು ಸರ್ಕಾರಕ್ಕೆ ಹಿಂತಿರುಗಿಸಲು ಅನುಮತಿಸಿದ್ದ ಕ್ರಮ ಪ್ರಶ್ನಿಸಿ ಜಯಲಲಿತಾ ಕಾನೂನು ವಾರಸುದಾರರು ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಜಯಲಲಿತಾ ಸಹೋದರನ ಮಕ್ಕಳಿಬ್ಬರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಕೀಲರು ವಾದ ಮಂಡಿಸಿ ಜಯಲಲಿತಾ ಅವರ ವಸ್ತುಗಳನ್ನು ಜಪ್ತಿ ಮಾಡಿರುವ ಕ್ರಮವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಈ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬದ್ಧ ಎಂದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಅವಧಿಯಲ್ಲಿನ ವಸ್ತುಗಳನ್ನು ಹೊರತಾಗಿ ಇನ್ನುಳಿದವುಗಳನ್ನು ಹಿಂದಿರುಗಿಸಲು ಮನವಿ ಮಾಡಲಾಗಿದೆ. ಆದರೆ, ಆ ಅವಧಿಯಲ್ಲಿನ ವಸ್ತುಗಳು ಯಾವುವು ಎಂಬುದಕ್ಕೆ ಸಮರ್ಪಕ ದಾಖಲೆಗಳನ್ನು ಒದಗಿಸಿಲ್ಲ.
ಹೀಗಾಗಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ. 2023ರ ಜುಲೈನಲ್ಲಿ ವಿಚಾರಣಾಧೀನ ನ್ಯಾಯಾಲಯವು ದೀಪಕ್ ಮತ್ತು ದೀಪಾ ಅವರ ಅರ್ಜಿಗಳನ್ನು ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.