

ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿ ಶೀಟರ್‌ಗಳನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹೊಸಕೆರೆಹಳ್ಳಿಯ ರೋಹಿತ್ ಅಲಿಯಾಸ್ ರಘು(೨೫) ಮತ್ತು ಬನಶಂಕರಿಯ ಮೋಹನ್(೩೫) ಬಂಧಿತರು. ಈ ಇಬ್ಬರೂ ಆರೋಪಿಗಳು ಬಸನವಗುಡಿ ಪೊಲೀಸ್ ಠಾಣೆಯ ರೌಡಿ ಶೀಟರ್‌ಗಳು.
ಆರೋಪಿ ರೋಹಿತ್ ೨೦೧೬ನೇ ಸಾಲಿನಿಂದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನ ವಿರುದ್ಧ ಬಸವನಗುಡಿ, ಹನುಮಂತನಗರ, ಸಿದ್ದಾಪುರ, ವಿವಿ ಪುರ, ಬೆಳ್ಳಂದೂರು, ಎಸ್‌ಜಿ ಪಾಳ್ಯ, ಜೆ.ಪಿ.ನಗರ, ಚೆನ್ನಮ್ಮನಕೆರೆ ಅಚ್ಚುಕಟ್ಟು ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ರಾಬರಿ, ಕಳವು, ದರೋಡೆಗೆ ಯತ್ನ ಸೇರಿ ೧೫ ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಕೆಲ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿಯು ಜಾಮೀನು ಪಡೆದು ಹೊರಗೆ ಬಂದು ಕಳೆದ ೮ ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಈತನ ಬಂಧನಕ್ಕೆ ವಾರೆಂಟ್ ಹೊರಡಿಸಿತ್ತು. ಇದರ ಬೆನ್ನಲ್ಲೇ ಬಸನವಗುಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕೋರ್ಟ್ ಹಾಜರಾಗದೆ ತಲೆಮರೆಸಿಕೊಂಡಿದ್ದ:
ಮತ್ತೊಂದು ಪ್ರಕರಣದಲ್ಲಿ ಕಳೆದ ೮ ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಮೋಹನ್‌ನನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ೨೦೧೨ನೇ ಸಾಲಿನಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಈತನ ವಿರುದ್ಧ ಈ ಹಿಂದೆ ಬೆಂಗಳೂರು ನಗರ ಮತ್ತು ತಮಿಳುನಾಡು ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ೧೦ ಪ್ರಕರಣಗಳು ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಆರೋಪಿಯು ಜಾಮೀನು ಪಡೆದು ಹೊರಗೆ ಬಂದು ಕಳೆದ ೮ ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ವಾರೆಂಟ್ ಜಾರಿದ ಮಾಡಿದ ಹಿನ್ನೆಲೆಯಲ್ಲಿ ಬಸವನಗುಡಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.