

ಬೆಂಗಳೂರು: ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಶವವನ್ನು ಮೋರಿಯಲ್ಲಿ ಎಸೆದು ಪರಾರಿಯಾಗಿರುವ ಘಟನೆ ಜಾಲಹಳ್ಳಿ ಸಮೀಪದ ಎಚ್‌ಎಂಟಿ ರಸ್ತೆಯಲ್ಲಿ ನಡೆದಿದೆ.
ದುಷ್ಕರ್ಮಿಗಳು ನ.೩೦ರಂದು ವ್ಯಕ್ತಿಯ ತಲೆಗೆ ಕಬ್ಬಿಣದ ಸಲಾಕೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಶವವನ್ನು ರಸ್ತೆ ಪಕ್ಕದ ಮೋರಿಯಲ್ಲಿ ಎಸೆದು ಪರಾರಿಯಾಗಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ವಯಸ್ಸು ಸುಮಾರು ೨೫ ವರ್ಷ. ಆದರೆ, ಅವರ ಗುರುತು ಪತ್ತೆಯಾಗಿಲ್ಲ ಎಂದು ಜಾಲಹಳ್ಳಿ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕೊಲೆಗೆ ಕಾರಣ ಏನೆಂದು ಗೊತ್ತಾಗಿಲ್ಲ. ಕೊಲೆ ಆರೋಪಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಘಟನಾ ಸ್ಥಳದ ಸುತ್ತಮುತ್ತಲಿನ ಸಿ.ಸಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿ ಆಧರಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.