

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೆ ಇದೀಗ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಹಳೆಯ ಪ್ರಕರಣ ಮುನ್ನೆಲೆಗೆ ಬಂದಿದೆ.
ಕಾನೂನುಬಾಹಿರವಾಗಿ ಗಣಿಗಾರಿಕೆ ಕಂಪನಿಯೊಂದಕ್ಕೆ ಜಮೀನು ನೀಡಿರುವ ಸಂಬಂಧ ಆರೋಪಪಟ್ಟಿ ಸಲ್ಲಿಸಲು ಲೋಕಾಯುಕ್ತ ವಿಶೇಷ ತನಿಖಾ ತಂಡ(ಎಸ್‌ಐಟಿ) ಪೊಲೀಸರು ರಾಜ್ಯಪಾಲರಿಗೆ ಮತ್ತೊಮ್ಮೆ ಮನವಿ ಮಾಡಿದ್ದಾರೆ.
ನಿಯಮ ಉಲ್ಲಂಘಿಸಿ ಅಸ್ತಿತ್ವದಲ್ಲಿ ಇಲ್ಲದ ಸಾಯಿ ವೆಂಕಟೇಶ್ವರ್ ಮಿನರಲ್ಸ್ ಕಂಪನಿಗೆ ಗಣಿಗಾರಿಕೆ ನಡೆಸಲು ೫೫೦ ಎಕರೆ ಜಾಗಕ್ಕೆ ಅನುಮತಿ ನೀಡಿದ ಆರೋಪ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಐಟಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಕೆ ಮಾಡಬೇಕಿದೆ. ಇದಕ್ಕೆ ರಾಜ್ಯಪಾಲರ ಅನುಮತಿ ಬೇಕಾಗಿರುವ ಕಾರಣ ಆರೋಪಪಟ್ಟಿ ಸಲ್ಲಿಕೆ ಬಾಕಿ ಉಳಿದಿದೆ. ಕಳೆದ ವರ್ಷವೇ ಅಭಿಯೋಜನೆಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿತ್ತು. ಆದರೆ, ರಾಜ್ಯಪಾಲರಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಮತ್ತೊಮ್ಮೆ ಅನುಮತಿ ಕೋರಿ ಮನವಿ ಮಾಡಲಾಗಿದೆ. ಕುಮಾರಸ್ವಾಮಿ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮಕ್ಕಾಗಿ, ಲೋಕಾಯುಕ್ತ ಎಸ್‌ಐಟಿ, ೨೦೨೩ರ ನ.೨೧ರಂದು ಅನುಮತಿ ಕೋರಿತ್ತು. ಆದರೆ ರಾಜ್ಯಪಾಲರಿಂದ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಮತ್ತೊಮ್ಮೆ ಎಸ್‌ಐಟಿಯವರು ಅಭಿಯೋಜನೆಗೆ ಮನವಿ ಮಾಡಿದ್ದರಿಂದ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ತೀವ್ರ ಸ್ವರೂಪಪಡೆದುಕೊಳ್ಳುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣವು ಚರ್ಚೆಯನ್ನು ಹುಟ್ಟುಹಾಕಿದೆ.
ಏನಿದು ಪ್ರಕರಣ?
ಸಾಯಿ ವೆಂಕಟೇಶ್ವರ ಮಿನರಲ್ಸ್ ಎಂಬ ಅಸ್ತಿತ್ವದಲ್ಲಿಲ್ಲದ ಸಂಸ್ಥೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ೨೦೦೭ರಲ್ಲಿ ಅ.೬ರಂದು ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನಲ್ಲಿ ೫೫೦ ಎಕರೆ ಜಾಗವನ್ನು ಗಣಿಗಾರಿಕೆಗೆ ಅಕ್ರಮವಾಗಿ ಗುತ್ತಿಗೆಗೆ ನೀಡಿದ್ದರು ಎಂಬ ಆರೋಪ ಇದೆ. ಗುತ್ತಿಗೆ ನೀಡುವಾಗ ಕಾನೂನು ಬಾಹಿರವಾಗಿ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳ ಜತೆ ಸೇರಿ ಸುಳ್ಳು ದಾಖಲೆ ಸೃಷ್ಟಿಸಿದ ವಿನೋದ್ ಗೋಯಲ್‌ಗೆ ಭೂಮಿ ಮಂಜೂರು ಮಾಡಿದ್ದಾರೆ ಎಂದು ಹೇಳಲಾಗಿದೆ. ಲೋಕಾಯುಕ್ತ ಎಸ್‌ಐಟಿ ತನಿಖೆಯಲ್ಲಿಯೂ ಈ ಬಗ್ಗೆ ಉಲ್ಲೇಖವಿದೆ. ಕಂಪನಿಯೇ ನಕಲಿಯಾಗಿದ್ದು, ಎಚ್.ಡಿ ಕುಮಾರಸ್ವಾಮಿಯವರು ಅಕ್ರಮವಾಗಿ ಸಹಾಯ ಮಾಡಿದ್ದಾರೆ ಎಂಬ ಆರೋಪವಿದೆ.