

ಬೆಂಗಳೂರು: ಡಿ. 27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar) ತಿಳಿಸಿದರು.
ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡಿ ಶಾಲಾ ಮೈದಾನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಾತನಾಡಿದರು.
ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ ಎಂದರು.
ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
“1924ರ ಅಧಿವೇಶನದ ದಾಖಲೆಗಳನ್ನು ಸಂಗ್ರಹಿಸಿದ್ದು, ಅದನ್ನು ಪುಸ್ತಕ ಮಾಡಿ ನಾಳೆ ಬಿಡುಗಡೆ ಮಾಡುತ್ತಿದ್ದೇವೆ. 26ರಂದು ಬೆಳಗ್ಗೆ 10 ಗಂಟೆಗೆ ವೀರ ಸೌಧದಲ್ಲಿ ಗಾಂಧಿ ಅವರ ಪುತ್ಥಳಿ ಅನಾವರಣ ಮಾಡಲಾಗುವುದು. ಜತೆಗೆ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಬೆಳಗ್ಗೆ 10.45ಕ್ಕೆ ಖಾದಿ ಮೇಳವನ್ನು ಉದ್ಘಾಟನೆ ಮಾಡಲಾಗುವುದು. 11.15ಕ್ಕೆ ಗಂಗಾಧರ ದೇಶಪಾಂಡೆ ಅವರ ಸ್ಮಾರಕವನ್ನು ನಾನು ಹಾಗೂ ಮುಖ್ಯಮಂತ್ರಿ ಅನಾವರಣ ಮಾಡಲಿದ್ದೇವೆ. ನಂತರ ಗಂಗಾಧರ ದೇಶಪಾಂಡೆ ಅವರ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಲಾಗುವುದು. ಮಧ್ಯಾಹ್ನ 3 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ರಾತ್ರಿ 7ಕ್ಕೆ ಎಐಸಿಸಿ ಅಧ್ಯಕ್ಷರಿಂದ ಭೋಜನಕೂಟ ಏರ್ಪಡಿಸಲಾಗಿದೆ ಎಂದು ವಿವರಿಸಿದರು.
27ರಂದು ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆಯನ್ನು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಅನಾವರಣಗೊಳಿಸಲಿದ್ದಾರೆ. ಮುಖ್ಯಮಂತ್ರಿಗಳು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಸಭಾಧ್ಯಕ್ಷರಾದ ಯು.ಟಿ ಖಾದರ್ ಹಾಗೂ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಮುಖಂಡತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಪಕ್ಷದ ನಾಯಕರಿಗೆ ಆಹ್ವಾನ ನೀಡಲಾಗುವುದು. ಸ್ಥಳೀಯ ನಾಯಕರು, ರಾಜ್ಯದ ಎಲ್ಲಾ ಸಂಸದರನ್ನು ನಾವು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದೇವೆ. 12 ಗಂಟೆಗೆ ಮುಖ್ಯಮಂತ್ರಿಗಳಿಂದ ಔತನಕೂಟ, ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.
ಬೆಳಗಾವಿ ಅಧಿವೇಶನದ ಶತಮಾನೋತ್ಸವ ಹಿನ್ನೆಲೆಯಲ್ಲಿ ಎಸ್ಕಾಂನವರು ಬೆಳಗಾವಿ ನಗರದಲ್ಲಿ ದೀಪಾಲಂಕಾರ ಮಾಡಿದ್ದು, ಬಹಳ ಉತ್ತಮವಾಗಿ ಅಲಂಕಾರ ಮಾಡಿದ್ದಾರೆ. ರಾಜ್ಯದ ಜನತೆ ಅದರಲ್ಲೂ ಕಿತ್ತೂರು ಕರ್ನಾಟಕ ಭಾಗದ ಜನ ಈ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳಬೇಕು ಎಂದು ಮನವಿ ಮಾಡಿದರು.