

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ. ಕಳೆದ ಬಜೆಟ್‌ನಲ್ಲಿ ಪಟ್ಟಿ ಮಾಡಿರುವ ಕಾಮಗಾರಿಗಳನ್ನು ಈಗಾಗಲೇ ಕೈಗೆತ್ತಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಾಲ್ಕನೇ ಹಂತದ ಅಮೃತ್ ನಗರೋತ್ಥಾನ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದ ಬಜೆಟ್‌ನಲ್ಲಿ ಘೋಷಿಸಿರುವ ಕಾಮಗಾರಿಗಳನ್ನು ಮುಂದುವರಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅದರ ಪ್ರಕಾರ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಲಾಗುವುದು ಎಂದು ತಿಳಿಸಿದರು.
ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನಸಾಮಾನ್ಯರು, ಬಡವರು, ಮಧ್ಯಮ ಮತ್ತು ಕೆಳವರ್ಗದವರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರಡಿ 45 ಸಾವಿರ ಕೋಟಿ ರೂ. ಹಣವನ್ನು ರಾಜ್ಯದಲ್ಲಿ ಫಲಾನುಭವಿಗಳ ಮನೆಮನೆಗೆ ತಲುಪಿಸಲಾಗಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಯೋಜನೆಯಡಿ 1.65 ಕೋಟಿ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲಾಗಿದೆ. ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಈಗಾಗಲೇ ರಾಜ್ಯದ 60 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಗೆ ಬದಲಾಗಿ ಹಣ ನೀಡಲಾಗುತ್ತಿದೆ. ಜನರ ಹಣವನ್ನು ಜನರಿಗೇ ನೀಡುತ್ತಿದ್ದೇವೆ. ಐದು ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಹಣದ ಹರಿವು ಹೆಚ್ಚಾಗಿದೆ ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, 18 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಏಳು ತಿಂಗಳಾದರೂ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿಲ್ಲ ಎಂಬ ಆರೋಪ ಮಾಡಲಾಗುತ್ತಿತ್ತು. ಈಗ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಉತ್ತರ ನೀಡಲಾಗಿದೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಜತೆಗೆ ಅಭಿವೃದ್ಧಿಯಲ್ಲಿ ರಾಜ್ಯ ಸರ್ಕಾರ ಕಮ್ಮಿ ಇಲ್ಲ ಎನ್ನುವುದಕ್ಕೆ ಇದು ಉದಾಹರಣೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದರು.
ನಗರಸಭಾಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಉಪಾಧ್ಯಕ್ಷ ಅಮೃತೇಶ್ ಚನ್ನಕೇಶವ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ನಗರಸಭೆ ಆಯುಕ್ತ ಬಸವರಾಜ್, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ನಾಗರತ್ನಾ ಇತರರಿದ್ದರು.