ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪುಂಡರು

Crime Logo
Published on

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವತಿಯೊಂದಿಗೆ ಮತ್ತೊಂದು ಬೈಕ್‌ನಲ್ಲಿ ಬರುತ್ತಿದ್ದ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿದ್ದಾರೆ.

ಬಾಣಸವಾಡಿಯ ಸೆಂಟ್ ಫ್ರಾನ್ಸಿಸ್ ಟೆಂಪಲ್ ಬಳಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಅಸ್ಸಾಂ ಮೂಲದ ೨೩ ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಬಾಣಸವಾಡಿ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂ ಮೂಲದ ಯುವತಿ ಒಂದೆರಡು ವರ್ಷಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದಾರೆ. ಏ.೨ರಂದು ಬಾಣಸವಾಡಿಯಲ್ಲಿರುವ ಸ್ನೇಹಿತರನ್ನು ಭೇಟಿಯಾಗಿ ಮುಂಜಾನೆ ೪.೩೦ಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ಎಲೆಕ್ಟ್ರಾನಿಕ್ ಸಿಟಿಗೆ ಹೋಗುತ್ತಿದ್ದರು. ಮಾರ್ಗ ಮಧ್ಯೆ ಹೆಣ್ಣೂರು ಮುಖ್ಯರಸ್ತೆಯ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಸಮೀಪದ ಸೆಂಟ್ ಫ್ರಾನ್ಸಿಸ್ ಟೆಂಪಲ್ ಬಳಿ ಹೋಗುವಾಗ, ಹಿಂದಿನಿಂದ ಮತ್ತೊಂದು ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಏಕಾಏಕಿ, ಯುವತಿಯ ತೊಡೆ ಮೇಲೆ ಹೊಡೆದಿದ್ದಾರೆ. ಅದನ್ನು ಪ್ರಶ್ನಿಸಿದಕ್ಕೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೆ, ನಮ್ಮ ಜತೆ ಬರುವಂತೆ ಹೇಳಿ ಅಸಭ್ಯವಾಗಿ ವರ್ತಿಸಿದ್ದಾರೆ. ಆದ್ದರಿಂದ ಗಾಬರಿಗೊಂಡ ಯುವತಿ, ವಾಹನ ನಿಲ್ಲಿಸಿ ರಕ್ಷಣೆಗೆ ಕೂಗಿಕೊಂಡಿದ್ದಾರೆ. ಆಗ ಸ್ಥಳೀಯರು ಆರೋಪಿಗಳನ್ನು ಹಿಡಿಯಲು ಯತ್ನಿಸಿದ್ದಾರೆ. ಆದರೆ, ಇಬ್ಬರು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಬೈಕ್‌ಗೆ ನಂಬರ್ ಪ್ಲೇಟ್‌ವಿರಲಿಲ್ಲ. ಹೀಗಾಗಿ ಕೃತ್ಯ ಎಸಗಲೆಂದೆ ನಂಬರ್ ಪ್ಲೇಟ್ ಇಲ್ಲದ ಬೈಕ್ ಅನ್ನು ಬಳಸಿರುವ ಸಾಧ್ಯತೆಯಿದೆ. ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಗುರುತಿಸಲಾಗಿದೆ. ಸದ್ಯದಲ್ಲೇ ವಶಕ್ಕೆ ಪಡೆಯಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net