

ಬೆಂಗಳೂರು: ರಾಜ್ಯದಲ್ಲಿ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವನೆ ನಮ್ಮ ಮುಂದೆ ಇಲ್ಲ. ಆದರೆ, ಕುಲಪತಿ ಹುದ್ದೆಗಾಗಿ ವಿಶ್ವವಿದ್ಯಾಲಯ, ಕೇವಲ 20ರಿಂದ 30 ಕಾಲೇಜುಗಳಿಗೆ ಒಂದು ವಿಶ್ವವಿದ್ಯಾಲಯ ಮಾಡಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬೆಂಗಳೂರು ವಿವಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳವಾರ ನೂತನ 9 ವಿವಿಗಳ ಮುಚ್ಚುವ ಬಗ್ಗೆ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನೂತನ ವಿಶ್ವವಿದ್ಯಾಲಯಕ್ಕಾಗಿ ಹೋರಾಟ ಮಾಡುತ್ತಿರುವವರು, ಆ ವಿವಿಗಾಗಿ ಎಷ್ಟು ಹಣ ಕೊಟ್ಟಿದ್ದಾರೆ ಎಂದು ಹೇಳಬೇಕು. ಈ ವಿವಿಗೆ ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ಕೊಡಿಸಲಿ ಎಂದು ತಿರುಗೇಟು ನೀಡಿದರು.
ಬಿಜೆಪಿ ಸರ್ಕಾರ ಕೇವಲ 2 ಕೋಟಿ ಹಣವಿಟ್ಟಿತ್ತು. ಅದನ್ನು ಕೂಡ ಬಿಡುಗಡೆ ಮಾಡಿಲ್ಲ. 2 ಕೋಟಿ ಹಣದಲ್ಲಿ ವಿವಿ ಸ್ಥಾಪನೆ ಮಾಡಲು ಆಗುವುದಿಲ್ಲ. ಇದಕ್ಕೆ ನೂರಾರು ಎಕರೆ ಜಾಗ ಬೇಕು. ಬೆಂಗಳೂರು ವಿವಿ ಮಾಡುವಾಗ ಹೇಗೆ 1,200 ಎಕರೆ ಜಮೀನು ಇಟ್ಟು ಸ್ಥಾಪಿಸಿದ್ದರೋ, ಅದೇ ರೀತಿ ಇದರಲ್ಲಿ ಅರ್ಧದಷ್ಟು ಜಾಗವನ್ನಾದರೂ ಮೀಸಲಿಡಬೇಕು ಎಂದು ತಿಳಿಸಿದರು.
ಕೇವಲ ಹೆಸರಿಗಾಗಿ ವಿವಿ ಮಾಡಲು ಆಗುವುದಿಲ್ಲ. 20-30 ಕಾಲೇಜುಗಳಿಗೆ ಒಂದು ವಿವಿ ಮಾಡಲು ಸಾಧ್ಯವಿಲ್ಲ. ಕುಲಪತಿ ಹುದ್ದೆಗಾಗಿ ವಿವಿ ಮಾಡಲು ಆಗುವುದಿಲ್ಲ. ಈ ಹಿಂದೆ ಈ ಪ್ರಯತ್ನ ಮಾಡಲಾಗಿತ್ತು. ಮಂಡ್ಯ, ಕೊಡಗು ಭಾಗದ ಅನೇಕ ವಿದ್ಯಾರ್ಥಿಗಳು ನಮಗೆ ಮೈಸೂರು ವಿವಿಯ ಹೆಸರಿನಲ್ಲೇ ಓದಬೇಕು. ಡಾ. ರಾಧಾಕೃಷ್ಣನ್, ಕುವೆಂಪು ಅವರಿದ್ದ ಮೈಸೂರು ವಿವಿಯಲ್ಲಿ ಓದಿದರೆ ನಮಗೂ ಬಹಳ ಗೌರವವಿರುತ್ತದೆ ಎಂದು ಮನವಿ ಮಾಡಿದ್ದಾರೆ. ಇನ್ನು ಸಿಬ್ಬಂದಿ ತಮ್ಮ ಹಿರಿತನ ವ್ಯರ್ಥವಾಗುತ್ತದೆ ಎಂದು ನೂತನ ವಿವಿಗೆ ಆಗಮಿಸಲು ಮುಂದಾಗುತ್ತಿಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ಕಲಾ ವಿಜ್ಞಾನ ಕಾಲೇಜನ್ನೇ (ಗ್ಯಾಸ್) ನೃಪತುಂಗ ವಿವಿ, ಮಹಾರಾಣಿ ಕಾಲೇಜನ್ನೇ ವಿವಿ ಮಾಡಲಾಗಿದೆ. ಒಂದೊಂದು ಕಾಲೇಜಿಗೆ ಒಂದೊಂದು ವಿವಿ ಮಾಡಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿ ನೀಡಿತ್ತು. ಇದಕ್ಕಾಗಿ ಸಚಿವ ಸಂಪುಟ ಉಪ ಸಮಿತಿ ಮಾಡಲಾಗಿತ್ತು. ಈ ಸಮಿತಿಯಲ್ಲಿ ನಾನು ಇದ್ದು ಚರ್ಚೆ ಮಾಡಿದ್ದೇನೆ. ಕೆಲವರು ರಾಜಕೀಯವಾಗಿ ಹೋರಾಟ ಮಾಡಬಹುದು. ನಮಗೆ ಮಕ್ಕಳ ವಿದ್ಯಾಭ್ಯಾಸ ಮುಖ್ಯ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ಈ ವಿಚಾರವಾಗಿ ಇನ್ನು ಯಾವುದೇ ಅಂತಿಮ ತೀರ್ಮಾನ ಮಾಡಿಲ್ಲ. ಪ್ರತಿಭಟನೆ ಮಾಡುವವರು ಮಾಡುತ್ತಿರುತ್ತಾರೆ. ವಿವಿ ಮಾಡಿದ್ದೇವೆ ಎಂದು ಹೇಳುತ್ತಿರುವವರು ಆ ವಿವಿಗೆ ಎಷ್ಟು ಹಣ ನೀಡಿದ್ದರು ಎಂದು ಹೇಳಬೇಕಲ್ಲವೇ? ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ತಂದು ಕೊಟ್ಟರೆ ಅಗತ್ಯವಿರುವ ಜಾಗ ಖರೀದಿ ಮಾಡಿ ವಿವಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.