

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲು ಭರ್ಜರಿ ತಯಾರಿ ನಡೆಯುತ್ತಿದೆ. ಮೊದಲ ಪ್ಲ್ಯಾನ್ನಂತೆ ನಡೆದಿದ್ದರೆ ಕುಂದಾ ನಗರಿ ಬೆಳಗಾವಿಯಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ, ಕೊನೇ ಗಳಿಗೆಯಲ್ಲಿ ಈ ಕಾರ್ಯಕ್ರಮ ಸಾಂಸ್ಕೃತಿಕ ನಗರಿ ಮೈಸೂರಿಗೆ ಸ್ಥಳಾಂತರವಾಗಿದ್ದು, ಆ. 30ಕ್ಕೆ ಯೋಜನೆ ಉದ್ಘಾಟನೆಯಾಗಲಿದೆ.
ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಸಿಎಂ ತವರು ಜಿಲ್ಲೆ ಮೈಸೂರನ್ನು ಆಯ್ಕೆ ಮಾಡಿರುವುದರ ಹಿಂದೆ ಮಾಸ್ಟರ್ ಪ್ಲ್ಯಾನ್ ಇದೆ ಎಂದು ಹೇಳಲಾಗಿದೆ. ಒಂದು ಅದ್ದೂರಿ ಕಾರ್ಯಕ್ರಮ ಮೂರು ಲೋಕಸಭಾ ಕ್ಷೇತ್ರದ ಗುಟ್ಟು ಇದರಲ್ಲಿ ಅಡಗಿದೆ ಎನ್ನಲಾಗಿದೆ. ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಸಿಎಂ ಕಣ್ಣು ಹಾಕಿದ್ದಾರೆ.
ಮೂರು ಕ್ಷೇತ್ರದ ಮತದಾರರನ್ನು ಒಟ್ಟಿಗೆ ಸೇರಿಸಿ ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದೆ ಎಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿ, ಮತದಾರರ ಮೂಡ್ ಬದಲಾಗದಂತೆ ನೋಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳೆದ ಚುನಾವಣೆಯಲ್ಲಿ ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಸುಮಲಾತಗೆ ಗೆಲುವು ಲಭಿಸಿತು. ಈ ಬಾರಿ ಶತಾಯಗತಾಯ ಮೂರು ಕ್ಷೇತ್ರಗಳನ್ನು ವಶ ಪಡಿಸಿಕೊಳ್ಳು ಸಿಎಂ ಮಾಸ್ಟರ್ ಪ್ಲ್ಯಾನ್ ಮಾಡಿದ್ದಾರೆ. ಒಂದುವರೆ ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಒಂದೇ ಸೂರಿನ ಅಡಿಯಲ್ಲಿ ಸೇರಿಸಿ ಅದ್ದೂರಿಯಾಗಿ ಗೃಹಲಕ್ಷ್ಮೀ ಯೋಜನೆಯನ್ನು ಉದ್ಘಾಟನೆ ಮಾಡಲು ಸಿದ್ಧತೆ ನಡೆಯುತ್ತಿದೆ.
ಆ. 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಹಿನ್ನೆಲೆಯಲ್ಲಿ ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿನತ್ತ ಪಯಣ ಬೆಳೆಸಲಿದ್ದಾರೆ. 11 ಗಂಟೆಗೆ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 11.30 ಗೃಹಲಕ್ಷ್ಮೀ ಯೋಜನೆ ಜಾರಿ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಚಿವರು, ಶಾಸಕರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಸಂಜೆ 4 ಗಂಟೆಗೆ ಡಿಕೆಶಿ, ಮೈಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ. (ದಿಗ್ವಿಜಯ ನ್ಯೂಸ್)