ಅಲ್ಪಸಂಖ್ಯಾತ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ; ಕ್ರಿಯಾಯೋಜನೆಗೆ ನಿರ್ದೇಶನ

Siddaramaiah
Published on

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು.

ಪ್ರಮುಖವಾಗಿ ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಬೇಕು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಸಚಿವ ಜಮೀರ್ ಅಹ್ಮದ್ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net