ಹುಲಿ ಸಂರಕ್ಷಣಾ ಜವಾಬ್ದಾರಿ ಎಲ್ಲರದ್ದು

ಹುಲಿ ಸಂರಕ್ಷಣಾ ಜವಾಬ್ದಾರಿ ಎಲ್ಲರದ್ದು
Published on

ಪಿರಿಯಾಪಟ್ಟಣ: ಅಳಿವಿನಂಚಿನಲ್ಲಿರುವ ಹುಲಿ ಸಂತತಿಯನ್ನು ಸಂರಕ್ಷಣೆ ಮಾಡುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ಆರ್‌ಎಫ್‌ಒ ಕೆ.ಇ.ಸುಬ್ರಮಣ್ಯ ತಿಳಿಸಿದರು.

ಅಂತಾರಾಷ್ಟ್ರೀಯ ಹುಲಿ ದಿನಾಚರಣೆ ಅಂಗವಾಗಿ ತಾಲೂಕಿನ ಮುತ್ತೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ಮುತ್ತೂರು ಶಾಖೆ ಸಿಬ್ಬಂದಿಗಳು ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಮತ್ತು ಪ್ರಬಂಧ ಸ್ಪರ್ಧೆಯನ್ನು ನಡೆಸಿ ಬಹುಮಾನ ವಿತರಿಸಿ ಮಾತನಾಡಿದರು. ಹುಲಿ ಸಂತತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡು ದೃಢ ಹೆಜ್ಜೆ ಇಟ್ಟಿದೆ ಎಂದರು.

ರಾಜ್ಯದ ವಿವಿಧ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಗಳನ್ನು ನಿರ್ಮಿಸುವ ಮೂಲಕ ಹುಲಿಗಳ ಚಲನ ವಲನಕ್ಕೆ ಯಾವುದೇ ರೀತಿಯ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. ವನ್ಯಜೀವಿಗಳ ಸಂರಕ್ಷಣೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಡ್ರಾಯಿಂಗ್ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಪಿ.ಎಲ್.ರಾಮಣ್ಣ ಮತ್ತು ಮಧುಪ್ರಸಾದ್, ಗಸ್ತು ವನಪಾಲಕರಾದ ಲಾಲ್ ಮೊಹಮದ್, ಕೆ.ಎಲ್.ರವಿ, ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ಮತ್ತು ಗಸ್ತು ವನಪಾಲಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net