

ಶಿವಮೊಗ್ಗ: ನಗರದ ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ 75ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಆ.25ರ ಬೆಳಗ್ಗೆ 10ಕ್ಕೆ ಅಂಬೇಡ್ಕರ್ ಭವನದಲ್ಲಿ ವಜ್ರ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ನರಸಿಂಹ ಗಂಧದಮನೆ ಹೇಳಿದರು.
ಅಸಂಘಟಿತ ಕಾರ್ಮಿಕರಿಗೆ ಸಾಲ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಈ ಸೊಸೈಟಿಯನ್ನು 1949 ರಲ್ಲಿ ಸ್ಥಾಪಿಸಲಾಯಿತು. ಅಂದಿನಿಂದ, ಸೊಸೈಟಿಯ ಸದಸ್ಯರ ಸಹಕಾರದಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಸ್ಮರಣ ಸಂಚಿಕೆಯನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬಿಡುಗಡೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಶಾರದಾ ಪೂರ‌್ಯಾನಾಯ್ಕಾ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಬೋಜೇಗೌಡ, ಡಿ.ಎಸ್.ಅರುಣ್, ಡಾ.ಧನಂಜಯ ಸರ್ಜಿ, ಬಲ್ಕೀಷ್ ಬಾನು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮುಂತಾದವರು ಭಾಗವಹಿಸಲಿದ್ದಾರೆ ಎಂದರು.
ಸಹಕಾರಿ ಸಂಸ್ಥೆಗೆ ಸಹಕರಿಸಿದ ಎಲ್ಲಾ ಮಾಜಿ ಅಧ್ಯಕ್ಷರಿಗೆ, ಕಾರ್ಯದರ್ಶಿಗಳನ್ನು ಸನ್ಮಾನಿಸಲಾಗುವುದು. ಎಸ್‌ಎಸ್‌ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ, ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾಪುರಸ್ಕಾರ, ಸಂಘ ಸದಸ್ಯರಿಗೆ ನೆನಪಿನ ಕಾಣಿಕೆ, ಸನ್ಮಾನವಿರಲಿದೆ ಎಂದು ಹೇಳಿದರು.
ಸಂಘದ ಮಾಜಿ ಅಧ್ಯಕ್ಷ ಎನ್. ಉಮಾಪತಿ ಮಾತನಾಡಿ, 2019-20 ನೇ ಸಾಲಿನಲ್ಲಿ ರಾಜ್ಯ ಸಹಕಾರ ಮಂಡಳ ಬೆಂಗಳೂರು ಹಾಗೂ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಂಡಳ ಬೆಂಗಳೂರು ಜಂಟಿಯಾಗಿ ನಡೆಸಿದ 66ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ ಉತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿತ್ತು. ಸಂಘ ಲಾಭದಾಯಕವಾಗಿ ನಡೆಯುತ್ತಿದೆ. ಪ್ರತಿ ವರ್ಷ 20 ಕೋಟಿ ರೂ. ವಹಿವಾಟಿದೆ ಎಂದು ಮಾಹಿತಿ ನೀಡಿದರು.
ಸ್ಮರಣ ಸಂಚಿಕೆ ಸಮಿತಿ ಅಧ್ಯಕ್ಷ ಜಿ.ಚಂದ್ರಶೇಖರ್, ಸಂಘದ ಉಪಾಧ್ಯಕ್ಷ ಬಿ.ಎಸ್.ವಿನಯ್, ಖಜಾಂಚಿ ಡಿ.ಶ್ಯಾಮ್, ನಿರ್ದೇಶಕರಾದ ಡಾ.ಕವಿತಾ ಸಾಗರ್, ಎ.ಸಂತೋಷ್, ಎಂ.ಮಂಜುನಾಥ ಸುದ್ದಿಗೋಷ್ಠಿಯಲ್ಲಿದ್ದರು.