

Tourists Attacked : ಜಮ್ಮು-ಕಾಶ್ಮೀರಾದ ಪಹಲ್ಲಾಮ್ ಪ್ರದೇಶದಲ್ಲಿ ಮಂಗಳವಾರ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಇದರಲ್ಲಿ ಕರ್ನಾಟಕದ ಶಿವಮೊಗ್ಗದ ವಿಜಯನಗರ ನಿವಾಸಿ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಬಲಿಯಾಗಿದ್ದಾರೆ.
ಇನ್ನು ಮಂಜುನಾಥ್ ಪತ್ನಿ ಹಾಗೂ ಪುತ್ರಿ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಮಂಜುನಾಥ್ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಶಿವಮೊಗ್ಗದ ನಿವಾಸದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು, ಮಂಜುನಾಥ್ ಪತ್ನಿ ಪಲ್ಲವಿ ಮಲ್ನಾಡ್ ಅಡಕೆ ಮಾರ್ಕೆಟಿಂಗ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಮ್ಯಾನೇಜರ್ ಆಗಿದ್ದಾರೆ.
ಮಾಧ್ಯಮಗಳ ಜತೆ ಮಾತನಾಡಿದ ಮೃತ ಮಂಜುನಾಥ್ ಪತ್ನಿ ಪಲ್ಲವಿ, ಏಪ್ರಿಲ್ 19ರಂದು ಪ್ರವಾಸಕ್ಕೆ ಬಂದಿದ್ವಿ. ನನ್ನ ಕಣ್ಣೆದುರಿಗೆ ನನ್ನ ಪತಿ ಮೃತಪಟ್ಟಿದ್ದಾರೆ. ನನ್ನ ಗಂಡನನ್ನ ಸಾಯಿಸಿ ನನ್ನ ಮಗನಿಗೆ ಬೈದು ಹಲ್ಲೆ ಮಾಡಿದ್ದಾರೆ. ನನ್ನ, ನನ್ನ ಮಗನನ್ನೂ ಕೊಂದು ಬಿಡು ಎಂದು ಹೇಳಿದ್ವಿ. ನಿನ್ನ ಕೊಲ್ಲಲ್ಲ ಹೋಗಿ ಮೋದಿಗೆ ಹೇಳು ಎಂದು ಹೇಳಿದರು. ನನ್ನ ಪತಿ ಕೊಂದು ಉಗ್ರರು ಅಲ್ಲೇ ಓಡಾಡುತ್ತಿದ್ದರು ಎಂದು ಹೇಳಿದ್ದಾರೆ.
ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು. ಸಿಎಂ ಸೂಚನೆ ಮೇರೆಗೆ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಪೊಲೀಸ್ ಅಧಿಕಾರಿಗಳೂ ತೆರಳಿದ್ದಾರೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಖಂಡಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಮೋದಿ, '' ಈ ಹೇಯ ಕೃತ್ಯದ ಹಿಂದಿರುವವರನ್ನು ನ್ಯಾಯದ ಕಟಕಟೆಗೆ ತರಲಾಗುವುದು... ಅವರನ್ನು ಬಿಡುವುದಿಲ್ಲ! ಅವರ ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದೆ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ'' ಎಂದಿದ್ದಾರೆ.