ಹೈಕೋರ್ಟ್ ವಕೀಲೆ ಅನುಮಾನಾಸ್ವದ ಸಾವು ಪ್ರಕರಣ: ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾವಣೆ

CCB
Published on

ಬೆಂಗಳೂರು: ಹೈಕೋರ್ಟ್ ವಕೀಲೆ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ನಿಗಮದ ಸಹಾಯಕ ಆಯುಕ್ತ ಆಗಿರುವ ಶಿವಕುಮಾರ್ ಅವರ ಪತ್ನಿ, ಚೈತ್ರಾವತಿ ಅನುಮಾನಾಸ್ವದ ಸಾವು ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಮೇ ೧೧ರಂದು ಸಂಜಯನಗರದ ಅಣ್ಣಯ್ಯ ಲೇಔಟ್ ನಿವಾಸಿ ಚೈತ್ರಾವತಿ(೩೪) ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಚೈತ್ರಾ ಸಹೋದರ ನೀಡಿದ ದೂರಿನ ಮೇರೆಗೆ ಸಂಜಯನಗರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿತ್ತು. ಈ ಮಧ್ಯೆ ಮೃತ ಚೈತ್ರಾವತಿ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ, ‘ನನ್ನ ಪತಿ ತುಂಬಾ ಒಳ್ಳೆಯವರು, ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನ ಪಟ್ಟಿದ್ದೇನೆ. ಆದರೆ ಆಗುತ್ತಿಲ್ಲ. ನಾನು ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೇನೆ. ಮಗುವನ್ನು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ’ ಎಂದು ಬರೆದಿರುವ ಡೆತ್‌ನೋಟ್ ಪತ್ತೆಯಾಗಿತ್ತು.
ಅಲ್ಲದೆ, ಬ್ಯಾಡ್ಮಿಂಟನ್ ಆಟಗಾರ್ತಿ, ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾವತಿ ಸಾವಿನ ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಕ್ರಮ ಕೈಗೊಂಡು ನ್ಯಾಯಒದಗಿಸಬೇಕು ಎಂದು ಬೆಂಗಳೂರು ವಕೀಲರ ಸಂಘ ಆಗ್ರಹಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದಿತ್ತು. ಈ ಹಿನ್ನೆಲೆಯಲ್ಲಿ ಚೈತ್ರಾವತಿ ಸಾವಿನ ಬಗ್ಗೆ ಕೆಲವೊಂದು ಅನುಮಾನಗಳು ಕಂಡು ಬಂದ ಹಿನ್ನೆಲೆಯಲ್ಲಿ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ಡಿಸಿಪಿ ಶ್ರೀನಿವಾಸಗೌಡ ಮತ್ತು ಎಸಿಪಿ ಪರಮೇಶ್ವರಪ್ಪ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಚುರುಕುಗೊಂಡ ತನಿಖೆ:
ಇತ್ತ ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಚೈತ್ರಾ ಜತೆಗೆ ಮಾತನಾಡಿರುವ ವ್ಯಕ್ತಿಗಳ ಕರೆ ಲಿಸ್ಟ್ ಮತ್ತು ಹಣಕಾಸು ವ್ಯವಹಾರದ ಪರಿಶೀಲನೆಗೆ ಮುಂದಾಗಿದೆ. ಅಲ್ಲದೆ, ಚೈತ್ರಾ ಸಾವಿನ ಹಿಂದಿನ ೧೫ ದಿನಗಳ ಸಿಸಿ ಕ್ಯಾಮರಾ ದೃಶ್ಯ ಪರಿಶೀಲನೆ ಮಾಡಲಾಗುತ್ತಿದೆ. ಇದರೊಂದಿಗೆ ಕೌಟುಂಬಿಕ ವಿಚಾರವಾಗಿ ಕೆಲ ಸಣ್ಣ-ಪುಟ್ಟ ಮನಸ್ತಾಪಗಳು ಇತ್ತು ಎಂದು ಹೇಳಲಾಗಿದೆ. ಅದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಕೈಸೇರಿದ ಬಳಿಕ ಸಾವಿನ ಹಿಂದಿನ ರಹಸ್ಯ ಭೇದಿಸಲು ಸಿಸಿಬಿ ತಯಾರಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net