

ಮೈಸೂರು: ಖ್ಯಾತ ಅರ್ಥಶಾಸ್ತ್ರಜ್ಞರಾದ ಪ್ರೊ.ಎಂ.ಮಾದಯ್ಯ ಅವರು ಪ್ರಾಧ್ಯಾಪಕರಾಗಿದ್ದಾಗ ಸದಾ ವಿದ್ಯಾರ್ಥಿಗಳೊಂದಿಗೆ ಅತ್ಯುತ್ತಮ ಬಾಂಧವ್ಯವನ್ನು ಹೊಂದಿದ್ದರು ಎಂದು ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಜಿ.ಹೇಮಂತ್‌ಕುಮಾರ್ ಹೇಳಿದರು.
ಶ್ರೀ ನಟರಾಜ ಶಿಕ್ಷಣ ಸಂಸ್ಥೆಗಳ ವತಿಯಿಂದ ಹೊಸಮಠದ ಶ್ರೀ ನಟರಾಜ ಸಭಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಪ್ರೊ.ಎಂ.ಮಾದಯ್ಯ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.
ಪ್ರೊ.ಎಂ.ಮಾದಯ್ಯ ಅವರು ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಮೈಸೂರು ವಿವಿ ಅರ್ಥಶಾಸ್ತ್ರದ ವಿಭಾಗದ ಮುಖ್ಯಸ್ಥರಾಗಿ, ಮೈಸೂರು ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಸ್ನಾತಕೋತ್ತರ ಶಾಖೆಗಳನ್ನು ಪ್ರಾರಂಭಿಸುವ ಮೂಲಕ ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲ ಕಲ್ಪಿಸಿದ್ದರು. ಸದಾ ವಿದ್ಯಾರ್ಥಿಗಳೊಂದಿಗೆ ಅತ್ಯುತ್ತಮ ಬಾಂಧವ್ಯವನ್ನು ಹೊಂದಿದ್ದರು. ಅವರಿಂದ ಪ್ರವಚನ ಕಲಿತ ಸಾವಿರಾರು ಶಿಷ್ಯಂದಿರು ಅವರ ಬಗ್ಗೆ ಅಪಾರ ಪ್ರೀತಿ, ಗೌರವ ಹೊಂದಿದ್ದಾರೆ ಎಂದರು.
ವಿಧ್ಯಾರ್ಥಿಗಳ ಜೊತೆಗೆ ನಗುತ್ತಲೇ ಸರಳ ಭಾಷೆಯಿಂದ ಪಾಠ ಪ್ರವಚನ ಮಾಡುತ್ತಿದ್ದರು. ಇವರು ಮೃದು ಸ್ವಭಾವದವರು. ತರಗತಿಯಲ್ಲಿ ಬೋಧಿಸುವ ವಿಷಯಗಳು ಸಹ ಅಷ್ಟೇ ಅತ್ಯಮೂಲ್ಯವಾಗಿದ್ದವು. ದೇಶ, ವಿದೇಶಗಳ ಅರ್ಥಿಕ ಸ್ಥಿತಿ ಗತಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸುತ್ತಿದ್ದರು ಎಂದರು.
ಶ್ರೀ ಚಿದಾನಂದ ಸ್ವಾಮೀಜಿ, ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ, ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿ.ನಾಗಣ್ಣ ಇತರರಿದ್ದರು.