

ಗಾಂಧಿನಗರ: ಟಿಪ್ಪರ್ ಲಾರಿ ಹಾಗೂ ಟೆಂಪೋ ಟ್ರಾವೆಲರ್ (TT) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್ನ ಸುರೇಂದ್ರನಗರ ಜಿಲ್ಲೆಯಲ್ಲಿ ನಡೆದಿದೆ.
ಅಪಘಾತದಲ್ಲಿ ಇಬ್ಬರು ಮಹಿಳೆಯರು ಹಾಗೂ ಮೂವರು ಪುರುಷರು ಮೃತಪಟ್ಟಿದ್ದು, ಟಿಟಿ (TT) ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಐದು ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸೈಲಾ ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಚುಡಾ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜೆಎನ್ ಗಮಾರ, ಸುರೇಂದ್ರನಗರ ಜಿಲ್ಲೆಯ ಲಿಂಬಿಡಿ ತಾಲೂಕಿನ ನವಿ ಮೊರವಾಡ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟೆಂಪೋ ಟ್ರಾವೆಲರ್ (TT) ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ,
ಮೃತರೆಲ್ಲರೂ ಪಶ್ಚಿಮ ಬಂಗಾಳ ಮೂಲದವರು ಎಂದು ತಿಳಿದು ಬಂದಿದ್ದು, ಸಂತ್ರಸ್ತರು ದಿಯು ಮತ್ತು ಗಿರ್‌ಗೆ ಪ್ರವಾಸೆಕ್ಕೆಂದು ತೆರಳಿ ವಾಪಸ್ ಆಗುತ್ತಿದ್ದಾಗ ದುರಂತ ಸಂಭವಿಸಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಚುಡಾ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜೆಎನ್ ಗಮಾರ ತಿಳಿಸಿದ್ದಾರೆ.