

ಶಿವಮೊಗ್ಗ: ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು, ರಾಷ್ಟ್ರಭಕ್ತರ ಬಳಗದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು. ವಿವಿಧ ಸಂಘಟನೆಗಳಿಂದ ವ್ಯಾಪಕ ಟೀಕೆಗಳು ಎದುರಾಗಿದ್ದು ಅದರ ಬೆನ್ನಲ್ಲೇ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ನಗರದ ಆದಿಚುಂಚನಗಿರಿ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ಬುಧವಾರ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ನೀಡಿರುವ ದೂರಿನ ಅನ್ವಯ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಜನಿವಾರ ತೆಗೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಬ್ರಾಹ್ಮಣ ಮಹಾಸಭಾ ಶುಕ್ರವಾರ ರಾತ್ರಿ ದೂರು ನೀಡಿತ್ತು. ಪರೀಕ್ಷಾ ವಿಚಾರದಲ್ಲಿ ಜನಿವಾರ ತೆಗೆಸಬೇಕೆಂಬ ನಿಯಮವಿಲ್ಲ. ಆದರೂ ಭದ್ರತಾ ಸಿಬ್ಬಂದಿ ಜನಿವಾರ ತೆಗಿಸಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆಂದು ಮಹಾಸಭಾ ಜಿಲ್ಲಾಧ್ಯಕ್ಷ ನಟರಾಜ್ ಭಾಗವತ್ ದೂರಿನಲ್ಲಿ ಆರೋಪಿಸಿದ್ದರು. ದೂರು ನೀಡುತ್ತಿದ್ದಂತೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.