

ಬೆಂಗಳೂರು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿದ್ದಾನೆ.
ಟಿ.ಸಿ.ಪಾಳ್ಯದ ಕುಮಾರ್(೫೭) ಮೃತ ಸವಾರ. ಶುಕ್ರವಾರ ಮಧ್ಯರಾತ್ರಿ ೧ ಗಂಟೆಗೆ ಭಟ್ಟರಹಳ್ಳಿ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಚಾಲಕ ಕಾರು ನಿಲ್ಲಿಸದೆ ಪರಾರಿಯಾಗಿದ್ದಾನೆ. ಕಾರು ಹಾಗೂ ಅದರ ಚಾಲಕನ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕುಮಾರ್ ಕೆಲಸ ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆ ಕಡೆಗೆ ಹೊರಟ್ಟಿದ್ದರು. ಭಟ್ಟರಹಳ್ಳಿ ಜಂಕ್ಷನ್‌ನಲ್ಲಿ ಹೋಗುವಾಗ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಹಿತ ರಸ್ತೆಗೆ ಬಿದ್ದ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು. ನೆರವಿಗೆ ಧಾವಿಸಿದ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕುಮಾರ್ ಮೃತಪಟ್ಟಿದ್ದಾರೆ. ಘಟನೆ ಬಳಿಕ ಕಾರು ಚಾಲಕ ಪರಾರಿಯಾಗಿದ್ದಾನೆ. ಘಟನಾ ಸ್ಥಳದ ಸಿಸಿ ಕ್ಯಾಮರಾ ದೃಶ್ಯಾವಳಿ ಪರಿಶೀಲಿಸಿ ಕಾರು ಹಾಗೂ ಅದರ ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.