

ನವದೆಹಲಿ: ಜೂನ್ 18ರಂದು (ಮಂಗಳವಾರ) ನಡೆದಿದ್ದ ಯುಜಿಸಿ ನೆಟ್ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪರೀಕ್ಷೆಯಲ್ಲಿನ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ವಿಶ್ವವಿದ್ಯಾಲಯ ಧನ ಸಹಾಯ ಆಯೋಗ-ನೆಟ್ 2024 ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಪರೀಕ್ಷೆಯನ್ನು ರದ್ದುಗೊಳಿಸಿದೆ.
ನ್ಯಾಷನ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಆಫ್ ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ. ಅದರ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಮಾಹಿತಿ ನಿಡಿದೆ. ಅಲ್ಲದೆ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದೆ.
ಜೂನ್ 18ರ UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆದ್ರೆ, ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸುವ ತೀರ್ಮಾನ ಕೈಗೊಂಡಿದೆ.