

ಲಕ್ನೋ: ನಿರ್ಜನ ಸ್ಥಳದಲ್ಲಿ ಕಬ್ಬಿಣದ ಪೆಟ್ಟಿಗೆಯಲ್ಲಿ ಭಾಗಶಃ ಸುಟ್ಟಿರುವ ಯುವತಿಯ ಮೃತದೇಹ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಲಕ್ನೋ ಬಳಿ ನಡೆದಿದೆ.
ಗೋಪಿಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಲಾಲಾ ನಗರದಲ್ಲಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಸ್ಥಳದಲ್ಲಿ ಕೆಲವರಿಗೆ ಕಬ್ಬಿಣದ ಪೆಟ್ಟಿಗೆ ಕಂಡಿದೆ. ಅದನ್ನು ತೆರೆದು ನೋಡಿದಾಗ ಅದರಲ್ಲಿ ಭಾಗಶಃ ಸುಟ್ಟ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಇದನ್ನು ನೋಡಿದ ಜನರು ಕಂಗಾಲಾಗಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ.
ಸುದ್ದಿ ತಿಳಿದ ಸ್ಥಳಕ್ಕಾಗಮಿಸಿದ ಪೊಲೀಸರು, ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ. ಮೃತ ಯುವತಿಗೆ 20 ವರ್ಷ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಯುವತಿಯನ್ನು ಕೊಂದ ನಂತರ ಆಕೆಯ ದೇಹವನ್ನು ಪೆಟ್ಟಿಗೆಯಲ್ಲಿ ಮುಚ್ಚಿ ಈ ಪ್ರದೇಶಕ್ಕೆ ತರಲಾಗಿದೆ. ಆಕೆಯ ಗುರುತು ತಪ್ಪಿಸಲು ಶವಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭದೋಹಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಮೀನಾಕ್ಷಿ, ಮೃತ ಬಾಲಕಿಯ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿತ್ತು. ಫೋರೆನ್ಸಿಕ್ ತಂಡ ಮತ್ತು ಶ್ವಾನದಳ ಘಟನಾ ಸ್ಥಳಕ್ಕೆ ಧಾವಿಸಿ ಸಾಕ್ಷ್ಯ ಸಂಗ್ರಹಿಸಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಾಲಕಿಯನ್ನು ಗುರುತಿಸುವ ಪ್ರಯತ್ನ ಮುಂದುವರಿದಿದೆ. ಕೊಲೆಗೂ ಮುನ್ನ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವ ಸಾಧ್ಯತೆ ಇದೆ. ಪ್ರಕರಣವನ್ನು ಎಲ್ಲಾ ಕಡೆಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)