ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಮೇಲ್ದರ್ಜೆಗೇರಿಸಿ

30NGD2
????????????????????????????????????
Published on

ನಂಜನಗೂಡು: ತಾಲೂಕಿನ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಆಗಿ ಮೇಲ್ದರ್ಜೆಗೇರಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ಚುನಾಯಿತ ಜನಪ್ರತಿನಿಧಿಗಳು ಗುರುವಾರ ತಾಲೂಕಿನ ಹುಲ್ಲಹಳ್ಳಿಯ ಶ್ರೀಕಂಠ ಜೋಯೀಸ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ಮಾಡಿದರು.

ಬೆಳಗ್ಗೆ 11ಗಂಟೆ ಸಮಯದಲ್ಲಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫಲಕಗಳನ್ನು ಹಿಡಿದು ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯತಿ ಸದಸ್ಯೆ ಮಂಗಳಾ ಸೋಮಶೇಖರ್ ಮಾತನಾಡಿ, ತಾಲೂಕಿನ ಅತ್ಯಂತ ದೊಡ್ಡ ಹೋಬಳಿ ಹಾಗೂ ವಾಣಿಜ್ಯ ಚಟುವಟಿಕೆಯ ಕೇಂದ್ರವಾದ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಆಗಿ ಪರಿವರ್ತಿಸಿದಲ್ಲಿ ನಾಗರಿಕರಿಗೆ ಅನುಕೂಲವಾಗಲಿದೆ. ಅಲ್ಲದೆ ಸ್ಥಳೀಯ ನಿವಾಸಿಗಳಿಗೆ ಮೂಲ ಸೌಕರ್ಯ ದೊರೆಯುವ ಜತೆಗೆ ವ್ಯವಸ್ಥಿತ ರೀತಿಯಲ್ಲಿ ಅಭಿವೃದ್ಧಿ ಸಾಧಿಸಲು ನೆರವಾಗಲಿದೆ ಎಂದರು.

ಈ ಸಂಬಂಧ ಕಳೆದ ಎರಡು ವರ್ಷಗಳಿಂದಲೂ ಹೋರಾಟ ನಡೆಸಲಾಗುತ್ತಿದ್ದು, ಈ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಈಗಿನ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರಿಗೂ ಮನವಿ ಸಲ್ಲಿಸಲಾಗಿದೆ. ಆದರೆ ಪ್ರಯೋಜನವಾಗಿಲ್ಲ. ಹೀಗಾಗಿ ಬಹಿರಂಗ ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಾಮರಾಜು, ಗ್ರಾ.ಪಂ.ಸದಸ್ಯರಾದ ಗೋಪಾಲನಾಯಕ, ಅಂಕನಾಯಕ, ಹತ್ತಿ ವ್ಯಾಪಾರಿಗಳ ಸಂಘದ ಜಿಲ್ಲಾ ಉಪಾಧ್ಯಕ್ಷ ಷಹಜಹಾನ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಶ್ರೀಕಂಠ ನಾಯಕ, ವಿಮಲಮ್ಮ, ನಂಜುಂಡನಾಯಕ, ಮಾಜಿ ಸದಸ್ಯರಾದ ನದೀಮ್ ಅಹಮದ್, ಶಿವಲಿಂಗನಾಯಕ, ತುಕಾರಾಮ್, ಸ್ಟುಡಿಯೋ ಮೋಹನ್ ಮತ್ತಿತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net