

ಹರಿಹರ: ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಗುರುವಾರ 5ನೇ ವರ್ಷದ ಜಾತ್ರಾ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಬೃಹತ್ ನೂತನ ರಥ ಲೋಕಾರ್ಪಣೆ ಹಾಗೂ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು.
ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ 64 ಅಡಿ ಎತ್ತರದ ರಥವನ್ನು ರಿಮೋಟ್ ಮೂಲಕ ಚಲಿಸುವಂತೆ ಮಾಡಲಾಗಿದೆ. ರಿಮೋಟ್ ನಿಯಂತ್ರಿತವಾಗಿರುವ ಕಾರಣ ರಾಜ್ಯದಲ್ಲಿಯೇ ಪ್ರಥಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದ ವಿವಿಧ ಮಠಾಧೀಶರು ರಥಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಭಕ್ತರ ಜಯಘೋಷದೊಂದಿಗೆ ಬೆಳಗ್ಗೆ 9.30ಕ್ಕೆ ಮಠದ ಆವರಣದಲ್ಲಿ ರಥವನ್ನು ಎಳೆಯಲಾಯಿತು.
ಈ ಸಂದರ್ಭದಲ್ಲಿ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಸ್ವಾಮೀಜಿ, ಪ್ರಸನ್ನಾನಂದ ಸ್ವಾಮೀಜಿ, ವಚನಾನಂದ ಸ್ವಾಮೀಜಿ,ಪುರುಷೋತ್ತಮಾನಂದಪುರಿ ಸ್ವಾಮೀಜಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಶಾಂತವೀರ ಸ್ವಾಮೀಜಿ, ಬಸವ ಮಡಿವಾಳ ಮಾಚಿದೇವ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಜೇವರ್ಗಿಯ ಸಿದ್ದಬಸವ, ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಜಾತ್ರಾ ಸಮಿತಿ ಅಧ್ಯಕ್ಷ ಎಸ್.ವಿ.ರಾಮಚಂದ್ರ ಇತರರಿದ್ದರು.