

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಯ್ದಿರಿಸಿರುವ ಅಂತಿಮ ತೀರ್ಪನ್ನು ಬುಧವಾರ (ಜು.೩೦) ಪ್ರಕಟಿಸಲಿದೆ.
ಸದ್ಯ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣನಿಗೆ ಟೆಂಕ್ಷನ್ ಶುರುವಾಗಿದೆ. ಒಂದು ವೇಳೆ ತಪ್ಪಿತಸ್ಥ ಎಂದು ಸಾಬೀತಾದರೆ ಜೈಲು ಶಿಕ್ಷೆ ಖಚಿತವಾಗಲಿದೆ.
ಪ್ರಕರಣ ಸಂಬಂಧ ಜು.೧೮ರಂದು ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು, ಬುಧವಾರ ತೀರ್ಪು ಪ್ರಕಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ತೀರ್ಪು ಪ್ರಕಟ ವೇಳೆ ಆರೋಪಿ ಪ್ರಜ್ವಲ್ ರೇವಣ್ಣನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಸಿಐಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಸಿಐಡಿ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಈ ಸಂಬಂಧ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿರುವ ನ್ಯಾಯಾಲಯವು ಬುಧವಾರ ಅಂತಿಮ ತೀರ್ಪು ಪ್ರಕಟಿಸಲಿದೆ.